ಇಂದಿನಿಂದ ಮುದ್ದೇಬಿಹಾಳ, ತಾಳಿಕೋಟೆ ಕೆರೆಗಳಿಗೆ ನೀರು

KannadaprabhaNewsNetwork |  
Published : Oct 07, 2026, 03:00 AM IST
ನೀರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಕೆರೆಗಳಿಗೆ ಆಲಮಟ್ಟಿ ಡ್ಯಾಂನಿಂದ ನೀರು ಹರಿಸುವಂತೆ ಸಲ್ಲಿಸಿದ್ದ ಮನವಿಗೆ ಸರ್ಕಾರ ಸ್ಪಂದಿಸಿದೆ. ಅಲ್ಲದೇ, ಅ.7ರಿಂದ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಂಡಿದೆ ಎಂದು ಶಾಸಕ ಸಿ.ಎಸ್.ಅಪ್ಪಾಜಿ ನಾಡಗೌಡ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಕೆರೆಗಳಿಗೆ ಆಲಮಟ್ಟಿ ಡ್ಯಾಂನಿಂದ ನೀರು ಹರಿಸುವಂತೆ ಸಲ್ಲಿಸಿದ್ದ ಮನವಿಗೆ ಸರ್ಕಾರ ಸ್ಪಂದಿಸಿದೆ. ಅಲ್ಲದೇ, ಅ.7ರಿಂದ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಂಡಿದೆ ಎಂದು ಶಾಸಕ ಸಿ.ಎಸ್.ಅಪ್ಪಾಜಿ ನಾಡಗೌಡ ತಿಳಿಸಿದ್ದಾರೆ.

ಈ ಕುರಿತು ದೂರವಾಣಿಯಲ್ಲಿ ಮಾಹಿತಿ ನೀಡಿದ ಅವರು, ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಹಲವು ಕೆರೆಗಳಲ್ಲಿ ನೀರಿನ ಪ್ರಮಾಣ ಗಣನೀಯ ಕುಸಿದಿದ್ದು, ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಚಿಮ್ಮಲಗಿ ಏತ ನೀರಾವರಿ ಯೋಜನೆ ಹಂತ-3ರ ಕಾಲುವೆ ಮೂಲಕ ಕೆರೆಗಳಿಗೆ ನೀರು ಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆ. ಈ ಕುರಿತು ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ಅ.4ರಂದು ಮನವಿ ಸಲ್ಲಿಸಲಾಗಿತ್ತು. ಜಲಸಂಪನ್ಮೂಲ ಸಚಿವರಿಗೆ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೂ ವಿಷಯ ತಂದು ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಲಾಗಿತ್ತು ಎಂದು ಹೇಳಿದರು.

ಮನವಿಗೆ ಸ್ಪಂದಿಸಿ ಅ.7ರಿಂದ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಂಡಿದೆ. ಇದರಿಂದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ರೈತರು, ಜಾನುವಾರುಗಳಿಗೆ ಅನುಕೂಲವಾಗಲಿದೆ ಎಂದರು.

ಶುಕ್ರವಾರ ಆಲಮಟ್ಟಿಯಲ್ಲಿ ಐಸಿಸಿ ಸಭೆ:

ನೀರು ಹರಿಸುವ ಕುರಿತು ಚರ್ಚಿಸಲು ಶುಕ್ರವಾರ ಆಲಮಟ್ಟಿಯ ಕೆಬಿಜೆಎನ್ಎಲ್ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ(ಐಸಿಸಿ) ಸಭೆ ನಡೆಯಲಿದೆ. ಸಭೆಯಲ್ಲಿ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ರೈತರ ಅಗತ್ಯತೆ ಹಾಗೂ ವಿವಿಧ ಪ್ರದೇಶಗಳಿಗೆ ಎಷ್ಟು ಪ್ರಮಾಣದಲ್ಲಿ ನೀರು ಹರಿಸಬೇಕು ಎಂಬುದರ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ. ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ, ಸಂಬಂಧಪಟ್ಟ ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಕುರಿತು ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಕೆರೆಗಳಿಗೆ ಹರಿಸಲಾಗುವ ನೀರನ್ನು ರೈತರು ಹಾಗೂ ಸಾರ್ವಜನಿಕರು ಸಮರ್ಪಕವಾಗಿ ಸಂಗ್ರಹಿಸಿಕೊಂಡು ಸದುಪಯೋಗಪಡಿಸಿಕೊಳ್ಳಬೇಕು. ರೈತರ ಹಿತ ಕಾಪಾಡುವಲ್ಲಿ ತಾವು ಸದಾ ಮುಂಚೂಣಿಯಲ್ಲಿದ್ದು, ರೈತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಬದ್ಧರಾಗಿರುವುದಾಗಿ ಶಾಸಕ ಸಿ.ಎಸ್. ಅಪ್ಪಾಜಿ ನಾಡಗೌಡ ಅವರು ತಿಳಿಸಿದ್ದಾರೆ. ಕೆರೆಗಳಿಗೆ ನೀರು ಹರಿಸಲು ಸ್ಪಂದಿಸಿದ ಸರ್ಕಾರಕ್ಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಪರಿಹಾರ ನಿಧಿಗೆ ₹ 2,600 ನೀಡಿದ ರೈತ
ಪರಂಪರೆ ಬೆಸೆಯಲು ಗಣೇಶೋತ್ಸವ ಅವಶ್ಯ