ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ತಮಿಳುನಾಡು, ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ವಿರುದ್ಧ ಘೋಷಣೆ ಕೂಗಿದರು. ನಂತರ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕುಳಿತು ರಸ್ತೆ ಸಂಚಾರಕ್ಕೆ ತಡೆಯೊಡ್ಡಿದರು. ಕಬ್ಬಿನ ಜೊಲ್ಲೆಯನ್ನು ಹಿಡಿದು ಘೋಷಣೆ ಕೂಗಿದರು. ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡಬೇಕೆಂಬ ಆದೇಶವನ್ನು ವಿರೋಧಿಸಿ ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿದರು.
ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಬರದ ಛಾಯೆ ಎದುರಾಗಿದೆ. ಕೆರೆ ಕಟ್ಟೆಗಳು ಒಣಗಿವೆ. ಜನ-ಜಾನುವಾರುಗಳು ನೀರಿನ ಬವಣೆಯನ್ನು ಎದುರಿಸುತ್ತಿದ್ದರೂ, ನೀರು ಬಿಡಬೇಕೆಂಬ ಆದೇಶವನ್ನು ಮಾಡಿರುವುದು ಕಣ್ಣಿದ್ದು, ಕುರುಡಾದಂತಾಗಿದೆ ಎಂದರು.ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳಿಗೆ ನೀರು ಒದಗಿಸಲು ಸಾಧ್ಯವಾಗದೆ. ಸಂಪೂರ್ಣವಾಗಿ ಒಣಗಿನಿಂತಿದೆ. ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ರೈತರು ಮನವಿ ಮಾಡುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಕೊಡಗು, ಕೇರಳದ ವೈನಾಡು ಪ್ರದೇಶದಲ್ಲಿ ಮಳೆ ಬೀಳುತ್ತಿತ್ತು. ಇದೀಗ ಅದೂ ಸಹ ಕಡಿಮೆಯಾಗಿದೆ. ಇನ್ನು ಮಳೆಯ ನಿರೀಕ್ಷೆ ಕಡಿಮೆಯಾಗಿದೆ. ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕೃಷಿ ಚಟುವಟಿಕೆಗೆ ಯಾವ ಪ್ರಮಾಣದಲ್ಲಿ ನೀರಿನ ಅಗತ್ಯವಿದೆ. ಕುಡಿಯುವ ನೀರಿಗೆ ಎಷ್ಟು ಬೇಕಾಗುತ್ತದೆ ಎಂಬ ಬಗ್ಗೆ ಸರಿಯಾದ ಅಂಕಿ ಅಂಶಗಳನ್ನು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಮುಂದೆ ಇಡುವಲ್ಲಿ ವಿಫಲರಾಗಿದ್ದಾರೆ. ಕಾರಣ ಇದೇ ರೀತಿಯಲ್ಲಿ ಪ್ರತಿ ಬಾರಿಯೂ ರಾಜ್ಯಕ್ಕೆ ಮಾರಕವಾಗುವಂತಹ ಆದೇಶ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮುಖಂಡರಾದ ಅಣ್ಣಯ್ಯ, ಕನ್ನಡ ಹೊಸಹಳ್ಳಿ ಶಿವು, ಶಿವಳ್ಳಿ ಚಂದ್ರು, ಉಮಾಶಂಕರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.