ತಮಿಳುನಾಡಿಗೆ ನೀರು: ಕನ್ನಡಪರ ಸಂಘಟನೆಗಳ ಪ್ರತಿಭಟನೆ

KannadaprabhaNewsNetwork |  
Published : Aug 04, 2026, 01:15 AM IST
ಸಿಕೆಬಿ-2 ಸಿಡಬ್ಲ್ಯು ಆರ್ ಸಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು | Kannada Prabha

ಸಾರಾಂಶ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ. 65.86 ರಷ್ಟು ಕೊರತೆಯಾಗಿದೆ.

ಸಿಡಬ್ಲ್ಯುಆರ್‌ಸಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಆದೇಶ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ, ತಮಿಳುನಾಡಿಗೆ ನೀರು ಹರಿಸದಂತೆ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತ ಭವನದ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಡಾ.ಆನಂದ್ ಅನು ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ. 65.86 ರಷ್ಟು ಕೊರತೆಯಾಗಿದ್ದು, ಕಾವೇರಿ ನದಿ ಪಾತ್ರ ಜಲಾಶಯಗಳಲ್ಲಿ 46 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. 10 ಜಿಲ್ಲೆಗಳ ಕುಡಿಯುವ ನೀರಿನ ಉದ್ದೇಶಕ್ಕೆ 12 ಟಿಎಂಸಿ ಅಡಿ ನೀರಿನ ಅಗತ್ಯವಿದೆ. ಮುಖ್ಯವಾಗಿ ರಾಜ್ಯದಲ್ಲಿ ಈ ವೇಳೆಗೆ ಶೇ 70ರಷ್ಟು ಮಳೆಯಾಗಬೇಕಿತ್ತು. ಬದಲಾಗಿ ಕೇವಲ ಶೇ20 ರಷ್ಟು ಮಾತ್ರ ಮಳೆಯಾಗಿದೆ.

ಕಾವೇರಿ ನಮ್ಮದು- ಕಾವೇರಿ ನದಿಯ ನೀರನ್ನು ಎರಡು ವಾರಗಳ ಕಾಲ ತಮಿಳುನಾಡಿಗೆ ಪ್ರತಿದಿನ 3.500 ಕ್ಯೂಸೆಕ್ಸ್ ಪ್ರಮಾಣದಲ್ಲಿ ಹರಿಸುವಂತೆ ಕಾವೇರಿ ನಿಯಂತ್ರಣ ಸಮಿತಿಯ ಆದೇಶವನ್ನು ತೀವ್ರವಾಗಿ ಖಂಡಿಸುತ್ತವೆ. ಮುಂಗಾರು ಮಳೆಯ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಅದ್ದರಿಂದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ನಮಗೆ ನೀರು ಇಲ್ಲದಿರುವುದರಿಂದ ಹೇಗೆ ತಮಿಳುನಾಡಿಗೆ ಬಿಡಲು ಸಾಧ್ಯ. ನೀರು ಬಿಟ್ಟರೇ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬಾಜಾನ್ ಮಾತನಾಡಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಪ್ರಭು .ಜಿ ರವರ ಮುಖಾಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕರವೇ ಬೆಂಗಳೂರು ನಗರ ಅಧ್ಯಕ್ಷ ಮಂಜುನಾಥ್, ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ಸುದೀಪ್ ರೆಡ್ಡಿ, ಮಹಿಳಾ ಜಿಲ್ಲಾಧ್ಯಕ್ಷೆ ಅಂಬಿಕ, ಪಧಾಧಿಕಾರಿಗಳಾದ ನವೀನ್, ಬಿ.ವಿ.ಆನಂದ್, ರವೀಂದ್ರ, ಬಿ.ಮುನಿಸ್ವಾಮಿ, ಮತ್ತಿತರರು ಇದ್ದರು.

ಸಿಕೆಬಿ-2 ಸಿಡಬ್ಲ್ಯುಆರ್‌ಸಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವಸ್ಥಾನ ಆಕಾಂಕ್ಷಿ ಬಿಆರ್‌ ಪಾಟೀಲ್‌, ಖನೀಜ್‌ ಫಾತೀಮಾಗೆ ನಿರಾಶೆ
ಪಿಂಚಣಿಗಳ ಕೊಡದ ಕಾಂಗ್ರೆಸ್‌ ಸರ್ಕಾರ: ರೇಣು