ಬೆಂಗಳೂರು : ಕೃತಕ ಬುದ್ಧಿಮತ್ತೆ(ಎಐ)ಯಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾಗುವಂತೆ ಸಿದ್ಧಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಂಠೀರಣ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂಗ್ಲಿಷ್, ಹಿಂದಿ ಭಾಷೆಗಳು ಮಕ್ಕಳ ಪ್ರತಿಭೆಯನ್ನು ದುರ್ಬಲಗೊಳಿಸುತ್ತಿದ್ದು ಮಾತೃ ಭಾಷೆಯಲ್ಲೇ ಶಿಕ್ಷಣ ನೀಡಲು ಸೂಕ್ತ ಕಾನೂನು ತರಬೇಕಿದೆ. ಕನ್ನಡ ಭಾಷೆ, ಪರಂಪರೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಅನಿವಾರ್ಯತೆ ಇದ್ದು, ಇದಕ್ಕಾಗಿ ಹೊಸ ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಕುರಿತು ನೂತನ ನೀತಿ ಜಾರಿಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ. ಕನ್ನಡ ನಾಡಿನ ಇತಿಹಾಸ, ಪರಂಪರೆಯ ನೆನಪುಗಳ ಬಗ್ಗೆ ಹೊಸ ತಲೆಮಾರಿಗೆ ಅರಿವು ಮೂಡಿಸಿ ಉಳಿಸಿ ಬೆಳೆಸುವ ಅವಶ್ಯಕತೆ ಇದೆ ಎಂದರು.
ಶಿಕ್ಷಣದಲ್ಲಿ ಕನ್ನಡ ನಿರ್ಲಕ್ಷ್ಯವು ಹಲವು ಸಮಸ್ಯೆ ಸೃಷ್ಟಿಸಿದೆ. ಮುಂದುವರೆದ ಭಾಷೆಗಳಿಗೆ ಇಲ್ಲದ ಬಿಕ್ಕಟ್ಟು ಕನ್ನಡಕ್ಕೆ ಎದುರಾಗಿದೆ. ಮುಂದುವರೆದ ದೇಶಗಳ ಮಕ್ಕಳು ತಾಯಿ ನುಡಿಯಲ್ಲೇ ಯೋಚಿಸುತ್ತಾರೆ, ಕಲಿಯುತ್ತಾರೆ, ಕನಸು ಕಾಣುತ್ತಾರೆ. ಆದರೆ ನಮ್ಮಲ್ಲಿ ಇದಕ್ಕೆ ತದ್ವಿರುದ್ಧವಾದ ಪರಿಸ್ಥಿತಿಯಿದೆ. ಮಾತೃಭಾಷೆಯಲ್ಲೇ ಶಿಕ್ಷಣ ನೀಡುವ ವ್ಯವಸ್ಥೆ ಜಾರಿಗೆ ತರಲು ಸೂಕ್ತ ಕಾನೂನು ತರಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಮುಂದಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿದ್ದರೂ, ಅನುದಾನ ನೀಡದೇ ಅನ್ಯಾಯ ಮಾಡಲಾಗುತ್ತಿದೆ. ಕರ್ನಾಟಕ ವಿರೋಧಿಯಾದ ಎಲ್ಲವನ್ನೂ ನಾವು ವಿರೋಧಿಸಲೇಬೇಕಾಗಿದೆ ಎಂದು ಸ್ಪಷ್ಟಪಡಿಸಿದರು.
ಶಿಕ್ಷಣಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿದ್ದು, 2,500 ಕೋಟಿ ರು. ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರು. ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು 1500ಕ್ಕೆ ವಿಸ್ತರಿಸಲಾಗುವುದು. ಶಿಕ್ಷಣ ಕ್ಷೇತ್ರದ ಬಲವರ್ಧನೆಗಾಗಿ ಈ ವರ್ಷ 65 ಸಾವಿರ ಕೋಟಿ ರುಪಾಯಿಗೂ ಅಧಿಕ ಸಂಪನ್ಮೂಲಗಳನ್ನು ವಿನಿಯೋಗಿಸಲಾಗುತ್ತಿದೆ. 18 ಸಾವಿರಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ವಿವರಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಶಾಸಕರಾದ ರಿಜ್ವಾನ್ ಅರ್ಷದ್, ಗಣೇಶ್ ಹುಕ್ಕೇರಿ, ಕೆ. ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.
ಸಂವಿಧಾನಾತ್ಮಕ ಪ್ರತಿಭಟನೆ ಅಗತ್ಯ: ಸಿಎಂ
ಕೇಂದ್ರ ಸರ್ಕಾರವು ರಾಜ್ಯಕ್ಕೆ ಅಗತ್ಯ ಅನುದಾನ ನೀಡುತ್ತಿಲ್ಲ. ತೆರಿಗೆ ಪಾಲಿನಲ್ಲಿ ಅನ್ಯಾಯ ಮಾಡುತ್ತಿದೆ. ಕಳೆದ 5 ವರ್ಷದಲ್ಲಿ 15ನೇ ಹಣಕಾಸು ಆಯೋಗ ಮೂಲಕ ಮಾಡಿದ ದ್ರೋಹದಿಂದ ಸುಮಾರು 70 ಸಾವಿರ ಕೋಟಿ ರು. ನಷ್ಟವಾಗಿದೆ. ಬಜೆಟ್‌ನಲ್ಲಿ ಘೋಷಿಸಿ ಕೊಡದ ಅನುದಾನ ಸೇರಿ ಒಟ್ಟಾರೆ 1 ಲಕ್ಷ ಕೋಟಿಗೂ ಅಧಿಕ ಅನ್ಯಾಯವಾಗಿದೆ. ಇದರ ವಿರುದ್ಧ ಸರ್ಕಾರ ಹೋರಾಟ ನಡೆಸುತ್ತಿದ್ದು, ಇಡೀ ನಾಡು ಸಂವಿಧಾನಾತ್ಮಕವಾಗಿ ಪ್ರತಿಭಟಿಸಬೇಕು. ಇಲ್ಲದಿದ್ದರೆ ನಮ್ಮನ್ನು ಆಪೋಶನ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
1500 ಮದರಸಾಗಳಲ್ಲಿ ಕನ್ನಡ ಕಲಿಕೆ: ಸಿಎಂ
ಕನ್ನಡಪ್ರಭ ವಾರ್ತೆ ಬೆಂಗಳೂರುಪ್ರಸಕ್ತ ವರ್ಷ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದ್ದು, ಇದನ್ನು ರಾಜ್ಯದಲ್ಲಿರುವ 1,500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ 483 ಕೋಟಿ ರು. ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶನಿವಾರ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯಬೇಕು. ಇದಕ್ಕಾಗಿ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಸ್ತುತ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದ್ದು, ಇದನ್ನು 1,500 ಮದರಸಾಗಳಿಗೆ ವಿಸ್ತರಿಸಲಾಗುವುದು. ಎಂದು ವಿವರಿಸಿದರು.ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿಯವರು ಈ ವರ್ಷ ಕನ್ನಡಕ್ಕೆ ಬುಕರ್ ಪ್ರಶಸ್ತಿಯನ್ನು ತಂದುಕೊಡುವ ಮೂಲಕ ನಮ್ಮ ಭಾಷೆಯ ಶಕ್ತಿಯನ್ನು ವಿಶ್ವ ವೇದಿಕೆಗೆ ಕೊಂಡೊಯ್ದಿದ್ದಾರೆ. ಅವರನ್ನೂ ಈ ಸಂದರ್ಭದಲ್ಲಿ ಹೃದಯ ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಹೇಳಿದರು.
ಕೇಂದ್ರದಿಂದ ಅನ್ಯಾಯ: ಸಿದ್ದು ಮತ್ತೆ ಆಕ್ರೋಶ
ಬೆಂಗಳೂರು : ಕೇಂದ್ರ ಸರ್ಕಾರವು ಹಿಂದಿ, ಸಂಸ್ಕೃತ ಭಾಷೆಗಳ ಅಭಿವೃದ್ಧಿಗೆ ಮಾತ್ರ ಅನುದಾನಗಳನ್ನು ನೀಡುತ್ತಿದೆ. ಕನ್ನಡವೂ ಸೇರಿ ಉಳಿದ ದೇಶ ಭಾಷೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಕಂಠೀರವ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜ ವಂದನೆ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.ಒಕ್ಕೂಟ ಸರ್ಕಾರವು ಕಳೆದ ಕೆಲ ವರ್ಷಗಳಿಂದ ಕರ್ನಾಟಕದಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. 4.5 ಲಕ್ಷ ಕೋಟಿ ರುಪಾಯಿಗಿಂತ ಅಧಿಕ ತೆರಿಗೆ ಸಂಪತ್ತು ಕರ್ನಾಟಕದಿಂದ ಸಂಗ್ರಹವಾಗುತ್ತಿದ್ದರೂ ನಮಗೆ ಬಿಡಿಗಾಸು ನೀಡಿ ಪ್ರತಿ ವರ್ಷ ಸಾವಿರಾರು ಕೋಟಿ ರು. ವಂಚಿಸುತ್ತಿದೆ. ಹಿಂದಿ, ಸಂಸ್ಕೃತದ ಅಭಿವೃದ್ಧಿಗೆ ಅನುದಾನ ನೀಡಿ ಕನ್ನಡ ಸೇರಿ ಉಳಿದ ಪ್ರಾದೇಶಿಕ ಭಾಷೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಟೀಕಿಸಿದರು.