ಕನ್ನಡಪ್ರಭ ವಾರ್ತೆ ಮಂಡ್ಯ
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಚಾಕು-ಚೂರಿ ಪಾರ್ಸೆಲ್ ಕಳುಹಿಸಿದ್ದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು
ನಗರದಲ್ಲಿರುವ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕೊತ್ವಾಲ್ ಸರ್ಕಾರ ಆಡಳಿತದಲ್ಲಿದೆ. ಇದೊಂದು ಕೊಲೆಗಡುಕರ ಸರ್ಕಾರ ಎಂದು ಘೋಷಣೆಗಳನ್ನು ಕೂಗಿ ಕಿಡಿಕಾರಿದರು.ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಶಂಕರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಗೂಂಡಾ ಸಂಸ್ಕೃತಿಯ ಸರ್ಕಾರ ಆಡಳಿತ ನಡೆಸುತ್ತಿದೆ. ಹೀಗಾಗಿ ವಿರೋಧ ಪಕ್ಷದ ನಾಯಕರ ಮನೆಗೆ ಚಾಕು-ಚೂರಿ ಕಳಿಸುತ್ತಾರೆ. ಇದಕ್ಕೆಲ್ಲಾ ಕೈಕಟ್ಟಿ ಕೂರುವುದಕ್ಕೆ ಬಿಜೆಪಿ ಕಾರ್ಯಕರ್ತರು ಬಳೆ ತೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆಂಪಬೋರಯ್ಯ ಛಲವಾದಿ ನಾರಾಯಣಸ್ವಾಮಿ ಅವರು ಸಭೆಯಲ್ಲಿ ಮಾತನಾಡುತ್ತಾ ರಾಜಕೀಯವಾಗಿ ಜನರಿಗೆ ವಂಚನೆ ಮಾಡುತ್ತಿರುವ ಬೆಲೆ ಏರುಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ತುಂಡು ತುಂಡಾಗಿ ಕತ್ತರಿಸುತ್ತೇವೆ ಎಂದು ಹೇಳಿರುವುದನ್ನು ಅಪಾರ್ಥ ಮಾಡಿಕೊಂಡು ಮನೆಗೆ ಚಾಕು-ಚೂರಿ ಕಳುಹಿಸಿದ ಘಟನೆ ಸಂಬಂಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಏಕೆಂದರೆ, ಈ ಗೃಹ ಸಚಿವರು ಛಲವಾದಿ ವಿರುದ್ಧ ಸದಾ ದ್ವೇಷ ಸಾಧಿಸುತ್ತಾ ಬಂದಿದ್ದಾರೆ. ಈ ಚಾಕು-ಚೂರಿ ಕಳುಹಿಸಿದ ಪ್ರಕರಣಕ್ಕೆ ಗೃಹ ಸಚಿವರೇ ನೇರ ಹೊಣೆಯಾಗಿದ್ದು, ಅವರ ವಿರುದ್ಧವೇ ಮೊದಲು ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮುಖಂಡ ನಿತ್ಯಾನಂದ ಮಾತನಾಡಿ, ಕಾಂಗ್ರೆಸ್‌ನಲ್ಲಿ ಗೂಂಡಾ ಸಂಸ್ಕೃತಿ ಇನ್ನೂ ಇದೆ ಎಂಬುದಕ್ಕೆ ವಿರೋಧ ಪಕ್ಷದ ನಾಯಕರ ಮನೆಗೆ ಚಾಕು-ಚೂರಿ ಕಳುಹಿಸಿರುವುದೇ ನಿದರ್ಶನ. ಕಾಂಗ್ರೆಸ್ ಕಾರ್ಯಕರ್ತರ ಪರವಾಗಿ ಸಿಎಂ ಡಿ.ಕೆ. ಶಿವಕುಮಾರ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.
ಕೆಪಿಸಿಸಿ ಕಚೇರಿಗೆ ಬದನೆಕಾಯಿ ಕಳುಹಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್, ಹೊಸಹಳ್ಳಿ ಶಿವು, ಶಂಕರ್, ಯೋಗೇಶ್, ರಾಜೀವ್‌ಗೌಡ ಪಾಲ್ಗೊಂಡಿದ್ದರು.