ಕನ್ನಡಪ್ರಭ ವಾರ್ತೆ ಬೆಂಗಳೂರು
ಮಳೆಯಿಂದಾಗಿ ಉಪ್ಪಿನಂಗಡಿ ಸಮೀಪದ ತುಂಬೆ ಡ್ಯಾಂನ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕೇರಳದಲ್ಲಿ ಮಳೆಯಾಗುತ್ತಿದ್ದು, ಕಬಿನಿಗೆ 24 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಭದ್ರತೆ ದೃಷ್ಟಿಯಿಂದ 25 ಸಾವಿರ ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ತುಂಗಭದ್ರಾ ಜಲಾಶಯದಲ್ಲಿ 30 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯದ ನೀರಿನ ಮಟ್ಟ 1606 ಅಡಿಗೆ ತಲುಪಿದೆ.
ಮಹಾರಾಷ್ಟ್ರ, ಬೆಳಗಾವಿಯಲ್ಲಿ ಮಳೆ ಆಗುತ್ತಿರುವುದರಿಂದ ಘಟಪ್ರಭಾ ನದಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಬರುತ್ತಿದ್ದು, ಗೋಕಾಕ್ ಫಾಲ್ಸ್ ತುಂಬಿ ಹರಿಯುತ್ತಿದೆ. ಯಾದಗಿರಿ ಜಿಲ್ಲೆಯ ನಾರಾಯಣಪುರ ಗ್ರಾಮದಲ್ಲಿರುವ ಬಸವಸಾಗರ ಜಲಾಶಯದಿಂದ 17 ಕ್ರಸ್ಟ್‌ಗೇಟ್‌ಗಳ ಮೂಲಕ 51,475 ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ಶೃಂಗೇರಿ ಸಮೀಪದ ಸಾಲ್ಮರ ಬಳಿ ಗುಡ್ಡ ಕುಸಿತ ಮುಂದುವರಿದಿದ್ದು, ಕೆಲ ಮನೆಗಳು ಅಪಾಯದ ಸ್ಥಿತಿ ಎದುರಿಸುತ್ತಿವೆ. ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಬೃಹತ್ ಮರವೊಂದು ಉರುಳಿಬಿದ್ದು, ಬೆಳಗಾವಿಯ ರುಕ್ಮೀಣಿ ನಗರದ ಮನೆ ಮುಂದೆ ನಿಲ್ಲಿಸಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಕೊಡಗಿನಲ್ಲಿ ಮಳೆ ಕಡಿಮೆಯಾಗಿದ್ದರೂ ತ್ರಿವೇಣಿ ಸಂಗಮದ ಉದ್ಯಾನವನ ನೀರಿನಲ್ಲೇ ಮುಳುಗಿದೆ.