ಹಿರಿಯೂರು ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ನಡೆದ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟ - 26ರ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಟ್ರೋಫಿಗಳನ್ನು ವಿತರಿಸಲಾಯಿತು.
ಕನ್ನಡಪ್ರಭ ವಾರ್ತೆ ಹಿರಿಯೂರು
ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ತೊಡಗಿಕೊಳ್ಳಲು ಸುಸಜ್ಜಿತವಾದ ಕ್ರೀಡಾಂಗಣ ಮತ್ತು ಇನ್ನಿತರ ಕ್ರೀಡಾ ಸಾಮಾಗ್ರಿಗಳನ್ನು ಒದಗಿಸಲಾಗುವುದು ಎಂದು ಕೆಳದಿ ಶಿವಪ್ಪ ನಾಯಕ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್ ತಿಳಿಸಿದರು.
ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ನಡೆದ 12ನೇ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟ-26ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸತತವಾಗಿ ಮೂರೂ ವರ್ಷ ಇಲ್ಲಿನ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟ ಆಯೋಜಿಸಿರುವುದು ತುಂಬಾ ಸಂತೋಷದ ವಿಷಯವಾಗಿದ್ದು, ಇಲ್ಲಿನ ಕ್ರೀಡಾಂಗಣ ವಿಶ್ವವಿದ್ಯಾಲಯ ಮಟ್ಟದಲ್ಲಿಯೇ ಅದ್ಭುತವಾಗಿದೆ ಎಂದರು.
ಕೃಷಿ ಸಚಿವರ ಕರ್ತವ್ಯಾಧಿಕಾರಿ ಡಾ.ಎ.ಬಿ ಪಾಟೀಲ್ ಮಾತನಾಡಿ, ಕ್ರೀಡಾಕೂಟ ಅಚ್ಚುಕಟ್ಟಾಗಿ ನಡೆಸಿದ್ದು ವಿದ್ಯಾರ್ಥಿಗಳಿಗೆ ದಕ್ಷಿಣ ಭಾರತ ಮತ್ತು ಅಖಿಲ ಭಾರತ ಮಟ್ಟದ ಕ್ರೀಡಾಕೂಟಗಳಿಗೆ ವಿದ್ಯಾರ್ಥಿಗಳು ಭಾಗವಹಿಸಲು ವಿಶ್ವವಿದ್ಯಾಲಯದ ವತಿಯಿಂದ ಅವಕಾಶ ನೀಡುತ್ತಿರುವುದು ಶ್ಲಾಘನೀಯ ಎಂದರು.
ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಸುರೇಶ್ ಏಕಬೋಟೆ ಮಾತನಾಡಿ, ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ಥ್ರೋಬಾಲ್ ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಚಾಂಪಿಯನ್ ಆಗಿದ್ದು ಅಥ್ಲೆಟಿಕ್ಸ್ ನ ಮಹಿಳಾ ವಿಭಾಗದಲ್ಲಿ ಮೂಡಿಗೆರೆ ತೋಟಗಾರಿಕೆ ಮಹಾವಿದ್ಯಾಲಯ ಹಾಗೂ ಯೋಗ ಸ್ಪರ್ಧೆಯಲ್ಲಿ ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಚಾಂಪಿಯನ್ ಆಗಿದೆ ಎಂದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಶ್ರೀದೇವಿ ಕುಮಾರ್, ಸ್ನಾತಕೋತ್ತರ ಡೀನ್ ಡಾ.ಮಾವರ್ಕರ್,ಡಾ.ರಮೇಶ್, ವಿಶ್ವನಾಥ್ ಮುಂತಾದವರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.