ಮಹಿಳೆ ಮುಖ್ಯವಾಹಿನಿಗೆ ಬಂದಾಗ ರಾಮರಾಜ್ಯ ನಿರ್ಮಾಣ: ಶ್ರೀದೇವಿ

KannadaprabhaNewsNetwork | Published : Jul 24, 2024 12:34 AM

ಸಾರಾಂಶ

ಸೋಮವಾರಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಸೋಮವಾರ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀದೇವಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಇಲ್ಲಿನ ಕೊಡವ ಸಮಾಜದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಸೋಮವಾರ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀದೇವಿ ಉದ್ಘಾಟಿಸಿದರು.

ನಂತರ ಅವರು ಮಾತನಾಡಿ, ಯಾವಾಗ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರುತ್ತಾರೋ ಅಂದು ರಾಮರಾಜ್ಯ ನಿರ್ಮಾಣ ಮಾಡಲು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸುಂಟಿಕೊಪ್ಪ ಪೊಲೀಸ ಠಾಣೆಯ ಮುಖ್ಯ ಪೇದೆ ಆಶಾ ಮಾತನಾಡಿ, ಇಂದು ಸಮಾಜದಲ್ಲಿ ಮಾದಕ ದ್ರವ್ಯದ ಹಾವಳಿ ಹೆಚ್ಚಳದಿಂದಾಗಿ ಯುವಜನರ ಬದುಕು ಬೀದಿಗೆ ಬರುತಿದೆ. ಎಲ್ಲಿ ನೋಡಿದರೂ ಮಾದಕ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಇದರಲ್ಲಿ ತಮ್ಮ ಮಕ್ಕಳು ಸಿಲುಕದ ಹಾಗೆ ಪೋಷಕರು ಎಚ್ಚರ ವಹಿಸಬೇಕಿದೆ ಎಂದರು.

ಸಾಮಾಜಿಕ ಬದಲಾವಣೆಯ ಮಕ್ಕಳು ಅಡ್ಡದಾರಿ ಹಿಡಿಯುತ್ತಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡುವುದು ಬೇಡ. ಅವರಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಅವರನ್ನು ಸಮಾಜದಲ್ಲಿ ಗೌರವಯುತ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು ಎಂದರು.

ಇನ್ನೂ 18 ವರ್ಷ ತುಂಬದ ಮಕ್ಕಳು ವಾಹನ ಚಾಲನೆಗೆ ಅವಕಾಶ ಮಾಡಿಕೊಡುವುದು ಬೇಡ. ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಪೋಷಕರು ಮತ್ತು ಅವರಿಗೆ ವಾಹನ ನೀಡಿದವರು ಹೊಣೆಯಾಗುತ್ತಾರೆ ಎಂದರು. ವಿದ್ಯಾರ್ಥಿಗಳಿಗೆ ಸುಜ್ಞಾನ ಯೋಜನೆಯಡಿ ಪ್ರೋತ್ಸಾಹ ಧನ ವಿತರಿಸಲಾಯಿತು. ಸಂಪೂರ್ಣ ಸುರಕ್ಷಾ ಆರೋಗ್ಯ ಯೋಜನೆಯಡಿ ನೆರವು ಹಾಗೂ ವಾತ್ಸಲ್ಯ ಯೋಜನೆಯಡಿ ವೃದ್ಧ ನಿರ್ಗತಿಕರಿಗೆ ಆರ್ಥಿಕ ನೆರವು ನೀಡಲಾಯಿತು. ಒಕ್ಕೂಟದ ಉಪಾಧ್ಯಕ್ಷೆ ಉಷಾ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಜನಜಾಗೃತಿ ಸ್ಥಾಪಕ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ಜನಜಾಗೃತಿ ಸಮಿತಿ ಸದಸ್ಯ ಸುರೇಶ್ ಮಾಸಗೋಡು ಇದ್ದರು.

Share this article