ಕಾಟಾಚಾರಕ್ಕೆ ಯಾಕೆ ಕಾರ್ಯಕ್ರಮ ಮಾಡುತ್ತಿದ್ದೀರಿ: ಜಾನು ಲಮಾಣಿ

KannadaprabhaNewsNetwork |  
Published : Nov 15, 2026, 02:15 AM IST
ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ತಾಪಂ ಮಾಜಿ ಅಧ್ಯಕ್ಷ ಜಾನು ಲಮಾಣಿ ಮಾತನಾಡಿದರು. | Kannada Prabha

ಸಾರಾಂಶ

ಸಾರ್ವಜನಿಕರ ಕುಂದುಕೊರತೆ ಆಲಿಸಿ, ವಿವಿಧ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗುತ್ತಿರುವ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಅಧಿಕಾರಿಗಳೇ ಗೈರಾಗುತ್ತಿದ್ದು, ಯಾರ ಮುಂದೆ ನಮ್ಮ ಸಮಸ್ಯೆ ಹೇಳಬೇಕು? ಕಾಟಾಚಾರಕ್ಕೆ ಯಾಕೆ ಕಾರ್ಯಕ್ರಮ ಮಾಡುತ್ತಿದ್ದೀರಿ? ಸಭೆ ಮುಂದೂಡಿ.

ಅಧಿಕಾರಿಗಳ ಗೈರು: ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಅಸಮಾಧಾನ

ಕನ್ನಡಪ್ರಭ ವಾರ್ತೆ ಶಿರಹಟ್ಟಿಸಾರ್ವಜನಿಕರ ಕುಂದುಕೊರತೆ ಆಲಿಸಿ, ವಿವಿಧ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗುತ್ತಿರುವ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಅಧಿಕಾರಿಗಳೇ ಗೈರಾಗುತ್ತಿದ್ದು, ಯಾರ ಮುಂದೆ ನಮ್ಮ ಸಮಸ್ಯೆ ಹೇಳಬೇಕು? ಕಾಟಾಚಾರಕ್ಕೆ ಯಾಕೆ ಕಾರ್ಯಕ್ರಮ ಮಾಡುತ್ತಿದ್ದೀರಿ? ಸಭೆ ಮುಂದೂಡಿ ಎಂದು ತಾಪಂ ಮಾಜಿ ಅಧ್ಯಕ್ಷ ಜಾನು ಲಮಾಣಿ ಅಸಮಾಧಾನ ವ್ಯಕ್ತಪಡಿಸಿದರು. ಶನಿವಾರ ತಾಲೂಕಿನ ಛಬ್ಬಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇವಲ ಕಾರ್ಯಕ್ರಮ ಆಯೋಜಿಸಿ ಅರ್ಜಿಗಳನ್ನು ಸ್ವೀಕರಿಸುವುದರಿಂದ ಜನರ ಸಮಸ್ಯೆ ಬಗೆಹರಿಯುವುದಿಲ್ಲ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ ಹಾಜರಿದ್ದು, ಸಾರ್ವಜನಿಕರ ಅಹವಾಲು ಆಲಿಸಿ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಬೇಕು. ಬಾಕಿ ಇರುವ ಅರ್ಜಿಗಳಿಗೆ ನಿಗದಿತ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೂರದ ಗ್ರಾಮಗಳಿಂದ ಬಸ್ ಹಾಗೂ ಖಾಸಗಿ ವಾಹನಗಳಲ್ಲಿ ಪ್ರಯಾಣಿಸಿ, ದಿನನಿತ್ಯದ ಕೆಲಸ-ಕಾರ್ಯಗಳನ್ನು ಬದಿಗೊತ್ತಿ ಕಾರ್ಯಕ್ರಮಕ್ಕೆ ಬಂದಿದ್ದ ವೃದ್ಧರು, ಮಹಿಳೆಯರು ಹಾಗೂ ರೈತರು ಅಧಿಕಾರಿಗಳಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆಲವರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸಾಧ್ಯವಾಗದೆ ವಾಪಸಾಗಬೇಕಾಯಿತು.ಸರ್ಕಾರ ಜನರ ಮನೆ ಬಾಗಿಲಿಗೆ ಆಡಳಿತವನ್ನು ತಲುಪಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆದರೆ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಬೇಕಾದ ಅಧಿಕಾರಿಗಳೇ ಗೈರಾಗಿದ್ದರೆ ಇಂತಹ ಜನಸ್ನೇಹಿ ಕಾರ್ಯಕ್ರಮಗಳ ಉದ್ದೇಶ ಈಡೇರುವುದಾದರೂ ಹೇಗೆ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿತು. ತಾಲೂಕು ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ. ಜೆಜೆಎಂ ಕಾಮಗಾರಿಯಿಂದ ಹದಗೆಟ್ಟ ಛಬ್ಬಿ ಗ್ರಾಮದ ರಸ್ತೆಗಳನ್ನು ದುರಸ್ತಿಗೊಳಿಸಲು ಸಂಬಂಧಿಸಿದ ಏಜೆನ್ಸಿಗೆ ನೋಟಿಸ್ ನೀಡಬೇಕು. ಛಬ್ಬಿ-ನಾದಿಗಟ್ಟಿ ರಸ್ತೆ ಮಾರ್ಗದಲ್ಲಿ ಅಧಿಕ ಭಾರ ಹೊತ್ತ ವಾಹನಗಳ ಸಂಚಾರದಿಂದ ಉಂಟಾಗುತ್ತಿರುವ ಧೂಳಿನ ಸಮಸ್ಯೆಗೆ ಕಡಿವಾಣ ಹಾಕಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಇಲ್ಲದೆ ಕಲುಷಿತ ನೀರು ಪೂರೈಕೆಯಾಗುತ್ತಿರುವ ಕುರಿತು ಮುಖಂಡ ಚಂದ್ರು ಪೋತರಾಜ ಅಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಲು ಸಭೆಯಲ್ಲಿ ಅಧಿಕಾರಿಗಳು ಇಲ್ಲದೇ ಇರುವುದರಿಂದ ಕೆಲ ಹೊತ್ತು ಸಭೆಯಲ್ಲಿ ಗದ್ದಲ ಉಂಟಾಯಿತು.ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಕೆ. ರಾಘವೇಂದ್ರ ರಾವು ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಅಧಿಕಾರಿಗಳ ಪ್ರಮುಖ ಕರ್ತವ್ಯವಾಗಿದೆ. ಹಾಜರಿರುವ ವಿವಿಧ ಇಲಾಖೆಗಳ ಸಿಬ್ಬಂದಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ದಾಖಲಿಸಿಕೊಂಡು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಕಂದಾಯ ಇಲಾಖೆ-೫, ತಾಪಂ-೩, ಸಾರಿಗೆ ಇಲಾಖೆ-೧, ಶಿಶು ಅಭಿವೃದ್ಧಿ ಇಲಾಖೆ-೩, ಶಿಕ್ಷಣ ಇಲಾಖೆ-೨ ಸೇರಿದಂತೆ ಒಟ್ಟು ೧೪ ಅರ್ಜಿಗಳು ಸಲ್ಲಿಕೆಯಾಗಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳನ್ನು ಐಪಿಜಿಆರ್‌ಎಸ್ ಪೋರ್ಟಲ್‌ನಲ್ಲಿ ದಾಖಲಿಸಲಾಗಿದೆ. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಗಿದ್ದು, ಉಳಿದ ಅಹವಾಲುಗಳನ್ನು ಜಿಲ್ಲಾಡಳಿತಕ್ಕೆ ಕಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ, ದೇವಪ್ಪ ಲಮಾಣಿ, ಎಂ.ಎಚ್. ಮ್ಯಾಗೇರಿ, ಮೈಲಾರಪ್ಪ ಪೋತರಾಜ, ಸಿಡಿಪಿಒ ಮೃತ್ಯುಂಜಯ ಗುಡ್ಡದಾನವೇರಿ, ಎಇಇ ಮಲ್ಲಿಕಾರ್ಜುನ ಪಾಟೀಲ, ತಾಲೂಕು ವೈದ್ಯಾಧಿಕಾರಿ ಡಾ. ಸುಭಾಸ ದಯಗೊಂಡ, ಶಿವಾನಂದ ಮಾಳವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ