ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ದನಗಳನ್ನು ಕಟ್ಟುತ್ತಿದ್ದಾಗ ಘಟನೆ
ಕನ್ನಡಪ್ರಭವಾರ್ತೆ, ಬೇಲೂರು
ದನಗಳನ್ನು ಕಟ್ಟುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಘಟನೆ ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ನಡೆದಿದೆ.
ರೈತನ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ಶಬ್ದ ಮಾಡಿ ಆನೆ ಓಡಿಸಿದ್ದಾರೆ. ಬಳಿಕ ಗಾಯಾಳುವನ್ನು ತಕ್ಷಣವೇ ಬೇಲೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಿದ್ದಶೆಟ್ಟಿ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಘಟನೆಯ ಬಗ್ಗೆ ಮಾಹಿತಿ ಪಡೆದು ಅಗತ್ಯ ನೆರವು ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.ಕಣಗುಪ್ಪೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಹಾಗೂ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾಡಾನೆಗಳ ನಿರಂತರ ಸಂಚಾರದಿಂದ ಜೀವ ಹಾಗೂ ಆಸ್ತಿಗೆ ಅಪಾಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.