ಬ್ಯಾಡಗಿ: ರಾಜ್ಯಕ್ಕೆ ಬರ ಪರಿಹಾರ ವಿತರಣೆಯಲ್ಲಿ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಮತ್ತು ಪ್ರಧಾನಿ ಮೋದಿ ಎದುರು ಮಾತನಾಡಲು ದಮ್ಮು ಮತ್ತು ತಾಕತ್ತಿಲ್ಲದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರಾಗಿ ಮುಂದುವರೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಬ್ಯಾಡಗಿ ಪಟ್ಟಣದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಬೃಹತ್ ರೋಡ್ ಶೋ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಶಾಸಕರಾಗಿ, ಸಚಿವರಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಅವರನ್ನು ಭೇಟಿ ಮಾಡಲು ದೆಹಲಿ ಹಾಗೂ ಬೆಂಗಳೂರಿಗೆ ಹೋಗಬೇಕಾಗುತ್ತದೆ. ಆದರೆ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಗೆಲ್ಲಿಸಿದರೆ ತಮ್ಮ ಹಳ್ಳಿ, ತಮ್ಮ ಮನೆ ಬಾಗಿಲಿಗೆ ಬಂದು ಭೇಟಿ ನೀಡಿ ಸಂಕಷ್ಟಗಳಿಗೆ ಸ್ಪಂದಿಸುವರು. ಈ ಹಿನ್ನೆಲೆಯಲ್ಲಿ ಆಯ್ಕೆ ನಿಮ್ಮ ಕೈಯಲ್ಲಿದೆ ಎಂದರು. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾತನಾಡಿ, ಜನರ ಪ್ರೀತಿ, ವಿಶ್ವಾಸ ಗಮನಿಸಿದರೆ ಆನಂದಸ್ವಾಮಿ ಗಡ್ಡದೇವರಮಠ ಅತಿ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸಲು ಗ್ಯಾರಂಟಿ ಯೋಜನೆಗಳು ನಮ್ಮ ಪಕ್ಷಕ್ಕೆ ಶ್ರೀರಕ್ಷೆಯಾಗಲಿವೆ ಎಂಬ ವಿಶ್ವಾಸ ನನ್ನದು ಎಂದರು.