ರೈತರಿಗೆ ನೀಡಲಾಗಿರುವ ವಕ್ಫ್‌ ನೋಟಿಸ್ ತಕ್ಷಣ ಹಿಂಪಡೆಯಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

KannadaprabhaNewsNetwork | Updated : Nov 04 2024, 06:22 AM IST

ಸಾರಾಂಶ

ರಾಜ್ಯದ ವಿವಿಧೆಡೆ ವಕ್ಫ್‌ ಆಸ್ತಿ ಎಂದು ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರು : ರಾಜ್ಯದ ವಿವಿಧೆಡೆ ವಕ್ಫ್‌ ಆಸ್ತಿ ಎಂದು ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಅಲ್ಲದೆ, ಇನ್ನುಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆಯೂ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ರೈತರ ಆಸ್ತಿಗಳಿಗೆ ವಕ್ಫ್‌ ಆಸ್ತಿ ಒತ್ತುವರಿ ಎಂದು ವಿಜಯಪುರ ಸೇರಿದಂತೆ ವಿವಿಧೆಡೆ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದರು. ಇದರಿಂದ ನೂರಾರು ರೈತರು ಆತಂಕ್ಕೆ ಈಡಾಗಿದ್ದು, ರಾಜಕೀಯವಾಗಿ ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬದ ದಿನವಾದ ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿಗಳು ನೋಟಿಸ್‌ ನೀಡಿದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಅನಗತ್ಯವಾಗಿ ನೋಟಿಸ್‌ ನೀಡಿ ಜನರನ್ನು ಆತಂಕಕ್ಕೆ ಗುರಿ ಮಾಡಿದ್ದೀರಿ. ಇದನ್ನೇ ಬಂಡವಾಳ ಮಾಡಿಕೊಂಡು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿವೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ. ಇದಕ್ಕೆ ಕಾರಣ ಅಧಿಕಾರಿಗಳ ಬೇಜವಾಬ್ದಾರಿ ಕೆಲಸ ಎಂದು ಕಿಡಿಕಾರಿದರು.

ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ತಾಕೀತು ಮಾಡಿದರು.

ಕೂಡಲೇ ರೈತರಿಗೆ ನೀಡಿರುವ ನೋಟಿಸ್‌ ಹಿಂಪಡೆಯಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಿರ್ದೇಶನ ನೀಡಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ ಸೇರಿದಂತೆ ಹಲವರು ಹಾಜರಿದ್ದರು.

ಸಭೆಯ ನಿರ್ಣಯಗಳು* ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು

* ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು

* ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು

Share this article