ಬಾಲ್ಯ ವಿವಾಹ ಹೆಚ್ಚಳಕ್ಕೆ ಮಹಿಳಾ ಆಯೋಗ ಕಳವಳ

KannadaprabhaNewsNetwork | Published : Feb 6, 2025 11:46 PM

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು ನಿಯಂತ್ರಣಕ್ಕೆ ಗಂಭೀರ ಪ್ರಯತ್ನಗಳ ನಡೆಸಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ್ಯವಿವಾಹಕ್ಕೆ ಬಡತನವೇ ಪ್ರಮುಖ ಕಾರಣ. ಹಾಗಾಗಿ ಸರ್ಕಾರದ ಯೋಜನೆ, ಸೌಲಭ್ಯಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಿದರೆ ಬಡತನ ನಿರ್ಮೂಲನೆಯ ಜೊತೆಗೆ ಬಾಲ್ಯವಿವಾಹ ಪದ್ಧತಿ ಕೂಡ ತೊಲಗಲು ಸಾಧ್ಯವಾಗಲಿದೆ ಎಂದರು.

ಮಹಿಳೆ ಪೊಲೀಸ್ ಠಾಣೆಗೆ ದೂರು ಕೊಡಲು ಬಂದಾಗ ತಕ್ಷಣ ಸ್ಪಂದಿಸುವುದು ಬಹಳ ಮುಖ್ಯ. ಹೆಣ್ಣು ಮಕ್ಕಳು ಪೊಲೀಸ್ ಠಾಣೆಗೆ ಬಂದಾಗ ಮಹಿಳಾ ಸ್ನೇಹಿ ವಾತಾವರಣ ಇರಬೇಕು. ಮಹಿಳಾ ಸ್ನೇಹಿ ಪೊಲೀಸ್‍ಗೆ ಕರ್ನಾಟಕ ಪೊಲೀಸ್ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಸಾಮಾನ್ಯ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆ ನಡೆಸಲಾಗುತ್ತಿದೆ. ದೌರ್ಜನ್ಯ ಪ್ರಕರಣ ನಡೆದ ಪ್ರದೇಶಗಳನ್ನು ಗುರುತಿಸಿ, ನಿರಂತರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಚಿತ್ರದುರ್ಗ ತಾಲೂಕಿನ ಚಿಕ್ಕಪುರ ಗೊಲ್ಲರಹಟ್ಟಿ ಮೂಲಸೌಲಭ್ಯಗಳಿಂದ ವಂಚಿತವಾಗಿದ್ದು, ಕಂದಾಯ ಗ್ರಾಮವನ್ನಾಗಿ ಮಾಡಿ, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.

ಚಿಕ್ಕಪುರ ಗೊಲ್ಲರಹಟ್ಟಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ನಾಲ್ಕೈದು ಗ್ರಾಮಗಳಿಗೆ ಬಸ್ ಸೌಲಭ್ಯದ ಕೊರತೆ ಇದ್ದು, ಹೆಣ್ಣು ಮಕ್ಕಳ ಹಿತದೃಷ್ಠಿಯಿಂದ ಕೂಡಲೇ ಬಸ್ ಕಾರ್ಯಾಚರಣೆಗೆ ಕ್ರಮವಹಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಹರಿಗೆ ಕೂಲಿ ಕೆಲಸ ನೀಡಬೇಕು. ಗ್ರಾಮದಲ್ಲಿಯೇ ಪಡಿತರ ವಿತರಣೆಯಾಗಬೇಕು. ಗ್ರಾಮದಲ್ಲಿ ಒಮ್ಮೆ ವಿದ್ಯುತ್ ಹೋದರೆ, ಐದಾರು ದಿನ ವಿದ್ಯುತ್ ಸಂಪರ್ಕ ಪುನರ್ ಸ್ಥಾಪನೆ ಆಗುವುದಿಲ್ಲ. ವಿದ್ಯುತ್ ಸಮಸ್ಯೆಯಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಅಲ್ಲದೆ ದೂರವಾಣಿ ಕರೆ ಮಾಡಿದರೂ ಉತ್ತರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದು, ಸಾರ್ವಜನಿಕರ ದೂರಿಗೆ ಸ್ಪಂದಿಸದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸುಮಾರು 300 ಗೊಲ್ಲರಹಟ್ಟಿಗಳಿದ್ದು, ಈ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಕ್ರಮವಹಿಸಿದ್ದು, ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಸುಬ್ರಾನಾಯಕ್ ಮಾತನಾಡಿ, ಗೊಲ್ಲರಹಟ್ಟಿಗಳಿಗೆ ರಸ್ತೆ, ಚರಂಡಿ, ನಿವೇಶನ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳ ಕಲ್ಪಿಸಲು ಈಗಾಗಲೇ ತಾಲೂಕು ಮಟ್ಟದ ಅಧಿಕಾರಿಗಳು ಸಮೀಕ್ಷೆ ಕಾರ್ಯ ನಡೆಸುತ್ತಿದ್ದು, ಮಾಹಿತಿ ಪಡೆಯಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆಯ ಸ್ಥಿತಿಗತಿ ಅವಲೋಕನಕ್ಕಾಗಿ ಭೇಟಿ ನೀಡಿದಾಗ ಸಾಕಷ್ಟು ದೂರುಗಳು ಗಮನಕ್ಕೆ ಬಂದಿದ್ದು, ಜಿಲ್ಲಾಸ್ಪತ್ರೆಯ ವ್ಯವಸ್ಥೆಯು ಮನಸ್ಸಿಗೆ ನೋವುಂಟು ಮಾಡಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬಿಸಿ ನೀರು ಇಲ್ಲ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಳವಡಿಸಿರುವ ಲಿಪ್ಟ್ ವರ್ಕ್ ಆಗುತ್ತಿಲ್ಲ. ಜಿಲ್ಲಾಸ್ಪತ್ರೆಯಿಂದ ನಡೆಯುತ್ತಿರುವ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳು ಕಲ್ಪಿಸದೇ ಇರುವುದಕ್ಕೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರ ವಿರುದ್ಧ ಅಧ್ಯಕ್ಷೆ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದಿಂದ ನಗರ, ಪಟ್ಟಣಗಳಿಗೆ ಓದಲು ಬರುವ ಹೆಣ್ಣುಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿ, ಮೋಸದ ಬಲೆಗೆ ಬೀಳುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಹದಿಹರೆಯದ ಹೆಣ್ಣು ಮಕ್ಕಳು, ಸಾಮಾಜಿಕ ಜಾಲತಾಣದ ಬಳಕೆಯಲ್ಲಿ ಸಾಕಷ್ಟು ಎಚ್ಚರ ವಹಿಸಬೇಕು. ಯಾವುದೇ ಮೋಸ, ವಂಚನೆ ಅಥವಾ ಬೆದರಿಕೆಯಂತಹ ಪರಿಸ್ಥಿತಿ ಕಂಡುಬಂದಾಗ ಧೈರ್ಯವಾಗಿ ಎದುರಿಸಬೇಕು. ಪೊಲೀಸ್ ಇಲಾಖೆ ಕೂಡ ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಡಾ. ನಾಗಲಕ್ಷ್ಮಿ ಅವರು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Share this article