ಮಾಜಿ ಸಿಎಂ ಎಚ್ಡಿಕೆ ವಿರುದ್ಧ ಮಹಿಳೆಯರ ಪ್ರತಿಭಟನೆ

KannadaprabhaNewsNetwork | Published : Apr 16, 2024 1:01 AM

ಸಾರಾಂಶ

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ಸ್ವಾಭಿಮಾನಿ ಮಹಿಳಾ ವೇದಿಕೆ ಪದಾಧಿಕಾರಿಗಳು ಹಾಗೂ ಮಹಿಳೆಯರು ಪ್ರತಿಭಟನೆ ನಡೆಸಿದರು.

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ಸ್ವಾಭಿಮಾನಿ ಮಹಿಳಾ ವೇದಿಕೆ ಪದಾಧಿಕಾರಿಗಳು ಹಾಗೂ ಮಹಿಳೆಯರು ಪ್ರತಿಭಟನೆ ನಡೆಸಿದರು.

ನಗರದ ಐಜೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಿಂದಾಗಿ ಹಳೇ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣದ ಭಾಗವಾಗಿದೆ. ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾಗ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳು ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ಕುಮಾರಸ್ವಾಮಿ ನಾಡಿನ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಆ ಮೂಲಕ ಮಹಿಳಾ ವಿರೋಧಿ ಮನಸ್ಥಿತಿಯನ್ನು ಮಾಜಿ ಸಿಎಂ ಕುಮಾರಸ್ವಾಮಿ ಹೊರ ಹಾಕಿದ್ದಾರೆ. ಕೂಡಲೆ ಅವರು ರಾಜ್ಯದ ಮಹಿಳೆಯರ ಬಳಿ ಕೂಡಲೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದಷ್ಟು ಹಣ ಸಹಾಯ ಮಾಡುವ ಮೂಲಕ ಅವರ ಬದುಕನ್ನು ಹಸನುಗೊಳಿಸಲು ಮುಂದಾಗಿದೆ. ಆದರೆ, ಇದನ್ನು ಸಹಿಸಿಕೊಳ್ಳಲಾಗದೆ ಕುಮಾರಸ್ವಾಮಿ ಅವರು ತಮ್ಮ ಹತಾಶ ಭಾವನೆಯಿಂದ ಈ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷ ಪಾರ್ವತಮ್ಮ ಮಾತನಾಡಿ, ಮಾಜಿ ಸಿಎಂ ಕುಮಾರಸ್ವಾಮಿ ಅವರು, ರಾಜ್ಯದ ಮಹಿಳೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದ್ದಂತೆ ಐದುಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆಮೂಲಕ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳಿದರು.

ಈ ಪಂಚ ಗ್ಯಾರಂಟಿಯಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ ರಾಜ್ಯದ ಮಹಿಳೆಯರು ಪ್ರತಿ ತಿಂಗಳು ಎರಡು ಸಾವಿರ ಹಣ ಪಡೆಯುತ್ತಿದ್ದಾರೆ. ಉಚಿತ್ ವಿದ್ಯುತ್, ಅನ್ನಭಾಗ್ಯ ಹಾಗೂ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಆಮೂಲಕ ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಯ ಮುಖಂಡರಾದ ಕಿರಣ್, ವೆಂಕಟೇಶ್, ಹರೀಶ್ ಭಾಗವಹಿಸಿದ್ದರು.

15ಕೆಆರ್ ಎಂಎನ್ 5,6.ಜೆಪಿಜಿ

ರಾಮನಗರ ಐಜೂರು ವೃತ್ತದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು.

Share this article