ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 2500 ನಿವೇಶನಗಳನ್ನು ಸಿದ್ದಪಡಿಸಿ ಅರ್ಹ
ಜಿಲ್ಲಾಡಳಿತದ ಭವನದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಶ್ರಯ ಯೋಜನೆಯಡಿ ಪ್ರತಿ ತಾಲೂಕಿನಲ್ಲಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಿ ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು. ಈಗಾಗಲೇ ಜಿಲ್ಲಾದ್ಯಂತ 288 ಎಕರೆ ಸರ್ಕಾರಿ ಜಮೀನು ಗುರ್ತಿಸಿ ನಿವೇಶನ ಸಿದ್ದಪಡಿಸಲಾಗುತ್ತಿದೆ. ದೇವನಹಳ್ಳಿ ತಾಲೂಕಿನಲ್ಲಿ 62 ಎಕರೆ ಸರ್ಕಾರಿ ಜಮೀನಿನಲ್ಲಿ 557 ನಿವೇಶನಗಳನ್ನು ಸಿದ್ದಪಡಿಸಲಾಗಿದ್ದು ಮುಂದುವರಿದು ನಿವೇಶನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಆದಷ್ಟು ಬೇಗ ತಾಲೂಕಿನಲ್ಲಿ 2500 ನಿವೇಶನ ಸಿದ್ದಪಡಿಸಿ ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು ಎಂದರು.
ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಯಾವುದೇ ಜಾತಿ, ಪಕ್ಷವನ್ನು ನೋಡದೇ ನಿಷ್ಪಕ್ಷಪಾತದಿಂದ ಆಯ್ಕೆ ಮಾಡಬೇಕು. ಸ್ಥಳೀಯ ಹಂತದಲ್ಲಿ ಯಾವುದೇ ಸಮಸ್ಯೆ ಇರಲಿ ಯಾರ ಒತ್ತಡಕ್ಕೂ ಮಣಿಯದೆ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ 2500 ಮನೆಗಳನ್ನು ನೀಡುವ ಗುರಿ ಹೊಂದಿದ್ದು, ವಸತಿ ಸಚಿವರಿಂದ ಮಂಜೂರಾತಿ ದೊರೆತಿದೆ. ಶೀಘ್ರ ವಸತಿ ರಹಿತ ಅರ್ಹರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಪೋಡಿ ಅಭಿಯಾನದಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಅದನ್ನು ಹಾಗೇ ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ಅಧಿಕಾರಿಗಳ ಕೈಯಲ್ಲಿದೆ. ಮೊದಲು ಪೋಡಿ ಮುಕ್ತ ಗ್ರಾಮಗಳಾಗಬೇಕು. ಹಾಗಾಗಿ ಕಂದಾಯ ಅಧಿಕಾರಿಗಳು ಹಾಗೂ ಸರ್ವೆ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಉತ್ತಮ ಫಲಿತಾಂಶ ಬರಲು ಅಧಿಕಾರಿಗಳು, ಶಿಕ್ಷಕರು ಶ್ರಮಿಸಬೇಕು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ, ಹಾಸ್ಟೆಲ್ ಗಳಲ್ಲಿ ಅವಶ್ಯಕ ಮೂಲಭೂತ ಹಾಗೂ ಇನ್ನಿತರ ಸಮಸ್ಯೆಗಳಿದ್ದಲ್ಲಿ ಮಾಹಿತಿ ನೀಡಿ ಎಂದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೃಷಿ, ತೋಟಗಾರಿಕೆ ಚಟುವಟಿಕೆಗಳು ಶುರು ಆಗುತ್ತವೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದರು.ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ. ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ತಹಸೀಲ್ದಾರರಾದ ಬಾಲಕೃಷ್ಣ, ವಿದ್ಯಾ ವಿಭಾ ರಾಥೋಡ್, ಇಒಗಳಾದ ಇಒ ಶ್ರೀನಾಥ್ ಗೌಡ, ಮುನಿರಾಜು, ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
17ಕೆಡಿಬಿಪಿ2-ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ. ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ ಇತರರಿದ್ದರು.