ಕನ್ನಡಪ್ರಭ ವಾರ್ತೆ ವಿಜಯಪುರ
ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಕೇತ್ರದಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ ಅನಿಷ್ಟ ಪದ್ಧತಿಗಳಾದ ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹಗಳನ್ನು ತಡೆಯಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.ನಗರದ ಜಿ.ಪಂ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-೨೦೧೫ ಪೋಕ್ಸೋ ಕಾಯ್ದೆ-೨೦೧೨ ಬಾಲ್ಯವಿವಾಹ ನಿಷೇಧ ಕಾಯ್ದೆ-೨೦೦೬, ಆರ್.ಟಿ.ಇ ಕಾಯ್ದೆ-೨೦೦೯ರ ಕುರಿತು ಭಾಗೀದಾರ ಇಲಾಖೆಗಳ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡ ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಬಗ್ಗೆ ಕಳಕಳಿ ಹೊಂದಬೇಕು. ಅಂಗನವಾಡಿ, ಶಾಲೆ, ಗ್ರಾಮ ಪಂಚಾಯಿತಿ ತಾಲೂಕ ಪಂಚಾಯಿತಿ ಸೇರಿದಂತೆ ಮಕ್ಕಳ ಹಕ್ಕುಗಳ ಕಾಯ್ದೆಗಳ ಅನುಷ್ಠಾನಕ್ಕಾಗಿರುವ ಗ್ರಾಮ ಮಟ್ಟದಲ್ಲಿನ ಮಕ್ಕಳ ಸಮಿತಿಗಳು ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಗಳು ಸಕಾಲದಲ್ಲಿ ನಿಮಿತವಾಗಿ ಜಾಗೃತಿ ಸಭೆಗಳನ್ನು ಜರುಗಿಸುವ ಮೂಲಕ ಬಾಲ್ಯವಿವಾಹ ನಿಷೇಧ, ಕಾರ್ಮಿಕ ಪದ್ಧತಿ ತಡೆಯಲೂ ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸಬೇಕು ಎಂದರು.ವಿವಿಧ ಇಲಾಖೆಗಳು ಮಕ್ಕಳ ಕ್ಷೇತ್ರದಲ್ಲಿ ತಮ್ಮಿಂದ ಸಾಧ್ಯವಾದಷ್ಟು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಇದಕ್ಕೆ ಹಲವಾರು ಇಲಾಖೆಗಳು ಕೈ ಜೋಡಿಸಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಜಾಗೃತಿ ಮೂಡಿಸಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ೧೮ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆಯಬೇಕು ಎಂದರು.ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಾಣಾಧಿಕಾರಿ ರಿಷಿ ಆನಂದ ಮಾತನಾಡಿ, ಈ ಕಾರ್ಯಾಗಾರ ಹಮ್ಮಿಕೊಂಡಿರುವ ಮುಖ್ಯ ಉದ್ಧೇಶ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸೇರಿದಂತೆ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಮೂಡಿಸುವುದು ಹಾಗೂ ಅನಿಷ್ಟ ಪದ್ಧತಿಗಳ ಪರಿಣಾಮಕಾರಿಯಾಗಿ ತಡೆಯಲು ಕಾನೂನುಗಳಲ್ಲಿರುವ ಅವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಳ್ಳುವುದಾಗಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಮಕ್ಕಳ ಹಕ್ಕುಗಳ ರಕ್ಷಣೆಗೆ ಒತ್ತು ನೀಡಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ ಮುಂತಾದವರು ಇದ್ದರು.ವಿಜಯಪುರದ ಜಿ.ಪಂ ಸಭಾಂಗಣದಲ್ಲಿ ನಡೆದಎರಡು ದಿನದ ಕಾರ್ಯಾಗಾರದಲ್ಲಿ ಶಶಿಧರ ಕೋಸಂಬೆ ಚಾಲನೆ ನೀಡಿದರು.