ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ: ಸಂಸದ ಮಲ್ಲೇಶ್ ಬಾಬು ಕರೆ

KannadaprabhaNewsNetwork |  
Published : Oct 16, 2026, 01:15 AM IST
೧೫ಕೆಎಲ್‌ಆರ್-೨ಕೋಲಾರದ ನಾರಾಯಣಿ ಕನ್ವೇಕ್ಷನ್ ಹಾಲ್‌ನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡುತ್ತಿರುವ ಗಣ್ಯರು. | Kannada Prabha

ಸಾರಾಂಶ

ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಮಾತನಾಡಿ, ಪದವೀಧರ ಮತದಾರರು ತಮ್ಮ ಅಮೂಲ್ಯ ಮತವನ್ನು ನೀಡಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಮತಪತ್ರದಲ್ಲಿ ತಮ್ಮ ಹೆಸರಿನ ಎದುರು ಕ್ರಮ ಸಂಖ್ಯೆ ೨ ಇದ್ದು, ಮತದಾರರು ಚುನಾವಣಾ ನಿಯಮಾವಳಿಗಳ ಪ್ರಕಾರ ತಮ್ಮ ಮತ ಚಲಾಯಿಸಬೇಕು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೋಲಾರ

ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಕೆ.ಎಂ.ಸುರೇಶ್‌ರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಸಂಸದ ಮಲ್ಲೇಶ್ ಬಾಬು ಕರೆ ನೀಡಿದರು.

ನಗರದ ನಾರಾಯಣಿ ಕನ್ವೆನ್ಶನ್ ಹಾಲ್‌ನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕ್ಷೇತ್ರದಲ್ಲಿ ಸುಮಾರು ೩೩ ಸಾವಿರ ಮತದಾರರಿದ್ದು, ಚುನಾವಣೆ ಸಮೀಪಿಸಿರುವ ಹಿನ್ನೆಲೆ ಪ್ರತಿಯೊಬ್ಬ ಕಾರ್ಯಕರ್ತರು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮತದಾರರನ್ನು ನೇರವಾಗಿ ಸಂಪರ್ಕಿಸಿ ಎನ್‌ಡಿಎ ಮೈತ್ರಿಕೂಟದ ಸಾಧನೆಗಳು ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ಮನವರಿಕೆ ಮಾಡಿಕೊಡಬೇಕು ಎಂದರು.

೨೦೨೪ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದಂತೆ ಈ ಬಾರಿಯೂ ಸಂಘಟಿತವಾಗಿ ಶ್ರಮಿಸಬೇಕು. ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿಕೂಟವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಈಗಿನಿಂದಲೇ ಸಂಘಟನೆಯನ್ನು ಬಲಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಪಕ್ಷಗಳಾಗಿದ್ದು, ಕಾರ್ಯಕರ್ತರ ಸಂಕಷ್ಟಗಳಿಗೆ ಸ್ಪಂದಿಸುವ ಗುಣ ಎರಡೂ ಪಕ್ಷಗಳಲ್ಲಿದೆ. ಜೆಡಿಎಸ್‌ನಲ್ಲಿ ಸುಮಾರು ೩೦ ವರ್ಷಗಳ ಕಾಲ ಸಾಮಾನ್ಯ ಕಾರ್ಯಕರ್ತನಾಗಿ ದುಡಿದಿರುವ ಕೆ.ಎಂ.ಸುರೇಶ್ ಅವರಿಗೆ ಮೊದಲ ಬಾರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆತಿದೆ. ಪಕ್ಷಕ್ಕಾಗಿ ಸುದೀರ್ಘ ಕಾಲ ಶಿಸ್ತಿನಿಂದ ದುಡಿದಿರುವುದು ಅವರ ವಿಶೇಷತೆ ಎಂದು ಹೇಳಿದರು.

ವಿಧಾನ ಪರಿಷತ್ ಹಿರಿಯರ ಸದನವಾಗಿದ್ದು, ರಾಜ್ಯದ ಅಭಿವೃದ್ಧಿ ಮತ್ತು ಸಮಾಜದ ಹಿತದೃಷ್ಟಿಯಿಂದ ಮಹತ್ವದ ಚರ್ಚೆಗಳು ನಡೆಯುವ ವೇದಿಕೆಯಾಗಿದೆ. ಅಂತಹ ಸದನಕ್ಕೆ ಪದವೀಧರರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡುವ ಪ್ರತಿನಿಧಿ ಆಯ್ಕೆಯಾಗಬೇಕು ಎಂದರು.

ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿ, ಈ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು.

ಮುಳಬಾಗಿಲು ಶಾಸಕ ಸಮೃದ್ಧಿ ವಿ.ಮಂಜುನಾಥ್ ಮಾತನಾಡಿ, ಪಕ್ಷದ ಹೈಕಮಾಂಡ್ ಸೂಚನೆಯಂತೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಈಗಾಗಲೇ ಪಂಚಾಯಿತಿ ಮಟ್ಟದಲ್ಲಿ ತಂಡಗಳನ್ನು ರಚಿಸಿ ಚುನಾವಣಾ ಕಾರ್ಯ ಆರಂಭಿಸಲಾಗಿದೆ. ಕಾರ್ಯಕರ್ತರು ಮತ್ತು ಮುಖಂಡರು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ ಅಭ್ಯರ್ಥಿಯ ಪರವಾಗಿ ಮತಯಾಚಿಸಬೇಕು ಎಂದು ತಿಳಿಸಿದರು.

ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ಆಗ್ನೇಯ ಪದವೀಧರರ ಕ್ಷೇತ್ರ ವ್ಯಾಪಕವಾಗಿರುವುದರಿಂದ ಅಭ್ಯರ್ಥಿಯೊಬ್ಬರೇ ಎಲ್ಲ ಮತದಾರರನ್ನು ಸಂಪರ್ಕಿಸುವುದು ಕಷ್ಟ. ಹೀಗಾಗಿ ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮನ್ನೇ ಅಭ್ಯರ್ಥಿಯೆಂದು ಭಾವಿಸಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಈ ಕ್ಷೇತ್ರದಲ್ಲಿ ಬಿಜೆಪಿ ಹಲವು ಬಾರಿ ಗೆಲುವು ಸಾಧಿಸಿದ್ದು, ಬಿಜೆಪಿ, ಜೆಡಿಎಸ್ ಹಾಗೂ ಜೆಡಿಯು ಪಕ್ಷಗಳು ಒಂದಾಗಿ ಕಾರ್ಯನಿರ್ವಹಿಸುವುದರಿಂದ ಎನ್‌ಡಿಎ ಮೈತ್ರಿಕೂಟ ಬಲಿಷ್ಠವಾಗಿದೆ. ಈ ಬಲವನ್ನು ಉಳಿಸಿಕೊಂಡು ಹೋಗಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ತಿಳಿಸಿದರು.

ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ಮುಖಂಡರು ತಮ್ಮ ತಮ್ಮ ಗ್ರಾಮಗಳಿಗೆ ತೆರಳಿ ಪ್ರತಿಯೊಬ್ಬ ಮತದಾರರನ್ನು ಸಂಪರ್ಕಿಸಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರನ್ನೂ ಭೇಟಿ ಮಾಡಿ ಅಭ್ಯರ್ಥಿಯ ವ್ಯಕ್ತಿತ್ವ ಹಾಗೂ ಮೈತ್ರಿಕೂಟದ ಉದ್ದೇಶಗಳನ್ನು ವಿವರಿಸಬೇಕು ಎಂದರು.

ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ಆಪರೇಷನ್ ಹಸ್ತದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಕೆಲವು ಮುಖಂಡರನ್ನು ಬಂಧಿಸಿದ್ದನ್ನು ವಿರೋಧಿಸಿ ಪೊಲೀಸ್ ಕಮಿಷನರ್‌ರನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡಬೇಕು ಎಂಬ ನಿರ್ಧಾರ ಕೈಗೊಳ್ಳಲಾಯಿತು ಎಂದರು.

ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಮಾತನಾಡಿ, ಪದವೀಧರ ಮತದಾರರು ತಮ್ಮ ಅಮೂಲ್ಯ ಮತವನ್ನು ನೀಡಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಮತಪತ್ರದಲ್ಲಿ ತಮ್ಮ ಹೆಸರಿನ ಎದುರು ಕ್ರಮ ಸಂಖ್ಯೆ ೨ ಇದ್ದು, ಮತದಾರರು ಚುನಾವಣಾ ನಿಯಮಾವಳಿಗಳ ಪ್ರಕಾರ ತಮ್ಮ ಮತ ಚಲಾಯಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಶಾಸಕರಾದ ಶಿವಶಂಕರ್, ವೈ.ಸಂಪಂಗಿ, ಬಿ.ಪಿ.ವೆಂಕಟಮುನಿಯಪ್ಪ, ಮುಖಂಡರಾದ ಸಿಎಂಆರ್ ಶ್ರೀನಾಥ್, ಇಂಚರ ಗೋವಿಂದರಾಜು, ಮಹಿಳಾ ರಾಜ್ಯ ಘಟಕದ ಅಧ್ಯಕ್ಷೆ ರಾಮೇಗೌಡ, ರಮೇಶ್ ಬಾಬು, ಬಣಕನಹಳ್ಳಿ ನಟರಾಜ್, ಡಾ.ವೇಣುಗೋಪಾಲ್, ಹೂಡಿ ವಿಜಯಕುಮಾರ್, ವಾಸುದೇವ, ಬಾಬು ಮೌನಿ, ಶಿವಶಂಕರ್ ಗೌಡ, ಸಿ.ಡಿ.ರಾಮಚಂದ್ರ, ಮಮತಾ ಗೌಡ, ಕೇಶವ ಪ್ರಸಾದ್, ವಡಗೂರು ಹರೀಶ್, ಅರುಣಮ್ಮ, ಕೆಂಬೋಡಿ ನಾರಾಯಣಸ್ವಾಮಿ, ರಾಜೇಶ್ ಸಿಂಗ್, ಮಾಗೇರಿ ನಾರಾಯಣಸ್ವಾಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಧ್ವಾಚಾರ್ಯ ಜಯಂತಿ ಆಚರಣೆ ನಿರ್ಧಾರ ಸ್ವಾಗತಾರ್ಹ: ರಾಮಾಚಾರ್‌ ಘಂಟಿ
ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್‌ಗೆ ಮತ ನೀಡಿ: ಟಿ.ಬಿ.ಜಯಚಂದ್ರ