ಕನ್ನಡಪ್ರಭ ವಾರ್ತೆ ಹಾಸನ
ಹಲ್ಲೆಗೊಳಗಾದ ಕಾರ್ಮಿಕರನ್ನು ಸಾದಿಕ್ ಮತ್ತು ಗುಲ್ವಾರ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಗೇಟ್ ತೆರೆಯುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಏಕಾಏಕಿ ಕಾರ್ಮಿಕರ ಮೇಲೆ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಆರೋಪಿಗಳು ಕಾರ್ಮಿಕರ ಬಳಿ ಇದ್ದ ಮೊಬೈಲ್ ಫೋನ್ ಹಾಗೂ ಹಣವನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಇಬ್ಬರೂ ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಹಿಂದಿನ ನಿಖರ ಕಾರಣವೇನು, ದಾಳಿ ನಡೆಸಿದವರು ಯಾರು ಹಾಗೂ ಇದು ಪೂರ್ವಯೋಜಿತ ದಾಳಿಯೇ ಅಥವಾ ದರೋಡೆ ಉದ್ದೇಶದಿಂದ ನಡೆದ ಕೃತ್ಯವೇ ಎಂಬುದು ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.
ಹಾಸನ ಕೈಗಾರಿಕಾ ಪ್ರದೇಶದಲ್ಲಿ ಹೊರ ರಾಜ್ಯಗಳ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಯುವಕರು ಉದ್ಯೋಗ ಅರಸಿ ಆಗಮಿಸಿ ವಿವಿಧ ಕೈಗಾರಿಕಾ ಘಟಕಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯ ವಿವಿಧ ತಾಲೂಕುಗಳ ಯುವಕರು ಮತ್ತು ಯುವತಿಯರೂ ಇಲ್ಲಿನ ಕೈಗಾರಿಕೆಗಳಲ್ಲಿ ಉದ್ಯೋಗದಲ್ಲಿದ್ದಾರೆ. ಪ್ರತಿದಿನ ಬೆಳಗ್ಗೆಯಿಂದ ರಾತ್ರಿ ತನಕ ಸಾವಿರಾರು ಕಾರ್ಮಿಕರು ಕೆಲಸಕ್ಕೆ ಆಗಮಿಸಿ ಮನೆಗಳಿಗೆ ಹಿಂದಿರುಗುವ ಪ್ರದೇಶದಲ್ಲಿ ಭದ್ರತೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿರುವುದು ಕಾರ್ಮಿಕ ವರ್ಗದಲ್ಲಿ ಆತಂಕ ಹೆಚ್ಚಿಸಿದೆ. ಕೆಲಸ ಮುಗಿಸಿಕೊಂಡು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಮನೆಗಳಿಗೆ ತೆರಳುವ ಕಾರ್ಮಿಕರು, ವಿಶೇಷವಾಗಿ ನಿರ್ಜನ ಹಾಗೂ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದ ರಸ್ತೆಗಳಲ್ಲಿ ಸಂಚರಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೈಗಾರಿಕಾ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಬಳಕೆ ಮತ್ತು ಮಾರಾಟ, ಕಳ್ಳತನ, ದರೋಡೆ, ಗಲಾಟೆ ಹಾಗೂ ಹಲ್ಲೆಯಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ವಿವಿಧ ಶಿಫ್ಟ್‌ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಬೆಳಗ್ಗೆ, ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಕೈಗಾರಿಕಾ ಪ್ರದೇಶಕ್ಕೆ ಆಗಮಿಸುತ್ತಾರೆ. ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಹೊರಬರುವ ಕಾರ್ಮಿಕರಿಗೆ ಸುರಕ್ಷಿತ ಸಂಚಾರವೇ ದೊಡ್ಡ ಸವಾಲಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.ಈ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಾಹನಗಳ ಸಂಚಾರದ ಮೇಲೆ ನಿಗಾ ವಹಿಸಬೇಕು. ಕೈಗಾರಿಕಾ ಘಟಕಗಳ ಸುತ್ತಮುತ್ತ ರಾತ್ರಿ ವೇಳೆ ಗುಂಪು ಸೇರುವವರ ಚಟುವಟಿಕೆಗಳ ಬಗ್ಗೆ ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಕಾರ್ಮಿಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕೈಗಾರಿಕಾ ಪ್ರದೇಶದ ಹಲವು ಭಾಗಗಳಲ್ಲಿ ಸಮರ್ಪಕ ಬೀದಿ ದೀಪ ವ್ಯವಸ್ಥೆ ಇಲ್ಲದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಕತ್ತಲಿನಲ್ಲಿ ರಸ್ತೆಗಳಲ್ಲಿ ಸಂಚರಿಸುವ ಕಾರ್ಮಿಕರು ಹಾಗೂ ಮಹಿಳಾ ಉದ್ಯೋಗಿಗಳು ಹೆಚ್ಚಿನ ಆತಂಕ ಎದುರಿಸುತ್ತಿದ್ದಾರೆ. ರಾತ್ರಿ ವೇಳೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗಳಿಗೆ ತೆರಳುವ ಮಹಿಳಾ ಕಾರ್ಮಿಕರ ಸುರಕ್ಷತೆ ಕುರಿತು ಕೈಗಾರಿಕಾ ಘಟಕಗಳ ಸಿಬ್ಬಂದಿ ಹಾಗೂ ಕುಟುಂಬಸ್ಥರೂ ಕಳವಳ ವ್ಯಕ್ತಪಡಿಸುತ್ತಿದ್ದಾರೆ.