ಪಿಎಫ್ ಹಣ ಪಡೆಯುವ ನಿಯಮಗಳಲ್ಲಿ ಮಾಡಿರುವ ಬದಲಾವಣೆಯಿಂದ ಕಾರ್ಮಿಕರಿಗೆ ಅನಾನುಕೂಲವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು. ಹಿಂದಿನ ವ್ಯವಸ್ಥೆಯನ್ನೇ ಮುಂದುವರಿಸುವುದರ ಜೊತೆಗೆ ಪಿಎಫ್ ಹಣ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಎಂದು ಆಗ್ರಹಿಸಿದರು. ಗಾರ್ಮೆಂಟ್ಸ್ ಮುಂಭಾಗದಿಂದ ಆರಂಭಗೊಂಡಿದ್ದ ಪ್ರತಿಭಟನೆ ಬಳಿಕ ಅಂಬೇಡ್ಕರ್ ವೃತ್ತದವರೆಗೆ ವಿಸ್ತರಿಸಿತು. ಸಾವಿರಾರು ಕಾರ್ಮಿಕರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಕಲ್ಪಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಭವಿಷ್ಯ ನಿಧಿ ಹಣ ಪಡೆಯುವ ನಿಯಮಗಳಲ್ಲಿ ಕೇಂದ್ರ ಸರ್ಕಾರ ಮಾಡಿರುವ ಬದಲಾವಣೆಗಳನ್ನು ವಿರೋಧಿಸಿ ಅರವಿಂದ್ ಗಾರ್ಮೆಂಟ್ಸ್ ಹಾಗೂ ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರವೂ ಮುಂದುವರಿಯಿತು. ಎರಡನೇ ದಿನದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾವಿರಾರು ಕಾರ್ಮಿಕರು ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು.ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಪಿಎಫ್ ಹಣವು ಭವಿಷ್ಯದ ಆರ್ಥಿಕ ಭದ್ರತೆಯ ಪ್ರಮುಖ ಆಧಾರವಾಗಿದೆ. ಆದರೆ ಪಿಎಫ್ ಹಣ ಪಡೆಯುವ ನಿಯಮಗಳಲ್ಲಿ ಮಾಡಿರುವ ಬದಲಾವಣೆಯಿಂದ ಕಾರ್ಮಿಕರಿಗೆ ಅನಾನುಕೂಲವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು. ಹಿಂದಿನ ವ್ಯವಸ್ಥೆಯನ್ನೇ ಮುಂದುವರಿಸುವುದರ ಜೊತೆಗೆ ಪಿಎಫ್ ಹಣ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಎಂದು ಆಗ್ರಹಿಸಿದರು. ಗಾರ್ಮೆಂಟ್ಸ್ ಮುಂಭಾಗದಿಂದ ಆರಂಭಗೊಂಡಿದ್ದ ಪ್ರತಿಭಟನೆ ಬಳಿಕ ಅಂಬೇಡ್ಕರ್ ವೃತ್ತದವರೆಗೆ ವಿಸ್ತರಿಸಿತು. ಸಾವಿರಾರು ಕಾರ್ಮಿಕರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಕಲ್ಪಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡರು.ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಾಗೂ ಅಬಕಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲುಗಳನ್ನು ಆಲಿಸಿದರು. ಕಾರ್ಮಿಕರ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆದು, ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಭರವಸೆ ನೀಡಿದರು.ಕಾರ್ಮಿಕರ ವಾಸದ ಸಮಸ್ಯೆ ಹಾಗೂ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ತಾವು ಕೈಗೊಂಡಿದ್ದ ಕ್ರಮಗಳನ್ನು ಪ್ರಸ್ತಾಪಿಸಿದ ಸಚಿವರು, ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು. ಕಾರ್ಮಿಕರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮದ ಕುರಿತು ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.ಪಿಎಫ್ ನಿಯಮಗಳ ಕುರಿತು ಮಾತನಾಡಿದ ಅವರು, ಉದ್ಯೋಗ ಬದಲಾವಣೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಕಾರ್ಮಿಕರಿಗೆ ಪಿಎಫ್ ಹಣ ದೊರೆಯುವ ವ್ಯವಸ್ಥೆಯಲ್ಲಿ ಇದೀಗ ಬದಲಾವಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಸಮಸ್ಯೆಯನ್ನು ಸಂಬಂಧಪಟ್ಟ ಹಂತದಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು.ಪ್ರತಿಭಟನಾ ಸ್ಥಳದಲ್ಲಿ ತಾಲ್ಲೂಕು ದಂಡಾಧಿಕಾರಿ ಸಂತೋಷ್ ಕುಮಾರ್ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪಿಎಫ್ ನಿಯಮಗಳಲ್ಲಿನ ಬದಲಾವಣೆ ಹಿಂಪಡೆಯಬೇಕು, ಹಿಂದಿನ ವ್ಯವಸ್ಥೆಯನ್ನು ಮುಂದುವರಿಸಬೇಕು, ಪಿಎಫ್ ಹಣ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಹಾಗೂ ಕಾರ್ಮಿಕರ ಭವಿಷ್ಯ ನಿಧಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.