ಕನ್ನಡಪ್ರಭ ವಾರ್ತೆ ಮದ್ದೂರು
ಅಸಂಘಟಿತ ವಲಯದ ಕಾರ್ಮಿಕರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಹರಿಣಿ ಹೇಳಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಮತ್ತು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿದ್ಯುತ್ ಉಪಕರಣಗಳ ಕಿಟ್ ವಿತರಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ನೋಂದಾಯಿತ ಕಾರ್ಮಿಕ ಫಲಾನುಭವಿಗಳಿಗೆ ಪಿಂಚಣಿ, ಅಪಘಾತ ವಿಮಾ ಪರಿಹಾರ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸೌಲಭ್ಯಗಳನ್ನು ತಲುಪಿಸಬೇಕು ಎಂದು ಸಲಹೆ ನೀಡಿದರು.ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಮೂಲಕ ನ್ಯಾಯಾಲಯದಲ್ಲಿ ಇರುವ ಕಾರ್ಮಿಕರು ಒಳಗೊಂಡಂತೆ ಜನಸಾಮಾನ್ಯರ ವಾಜ್ಯಗಳನ್ನು ಆದಷ್ಟು ರಾಜೀಸಂಧಾನದ ಮೂಲಕ ಬಗೆಹರಿಸುವ ನಡೆಸುತ್ತಿದೆ. ಇದರಿಂದ ಕಕ್ಷಿದಾರರಿಗೆ ಹಣ ಮತ್ತು ಸಮಯ ಉಳಿತಾಯದ ಜೊತೆಗೆ ನ್ಯಾಯಾಲಯದಲ್ಲಿ ವಿಲೇವಾರಿಯಾಗದೆ ಬಾಕಿ ಉಳಿದಿರುವ ಮೊಕದ್ದಮ್ಮೆಗಳ ಶೀಘ್ರ ಇತ್ಯರ್ಥಕ್ಕೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಎರಡನೇ ಅಪರ ಸಿವಿಲ್ ನ್ಯಾಯಾಧೀಶ ಎನ್.ವಿ.ಕೋನಪ್ಪ ಮಾತನಾಡಿ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳ ಶ್ರಮ ಯೋಗಿ ಮಾನ್ ಧನ್ ಯೋಜನೆಯಡಿ ದೇಶದ ಅಸಂಘಟಿತ ವಲಯಕಾರ್ಮಿಕರಿಗೆ ಪಿಂಚಣಿ ಯೋಜನೆ, ಕಾರ್ಮಿಕ ಕಲ್ಯಾಣ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕರು ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಯೋಜನೆಗಳ ಲಾಭವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಮಂಡ್ಯ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಕೀಲ ಎಂ. ಮಹೇಶ್ ಸಂಪನ್ಮೂಲ ಭಾಷಣ ಮಾಡಿದರು. ಎಂ.ಎನ್.ಶಿವಣ್ಣ, ಕಾರ್ಯದರ್ಶಿಎಂ.ಜೆ. ಸುಮಂತ್, ಕಾರ್ಮಿಕ ನಿರೀಕ್ಷಕಿ ನಾಗರತ್ನ ಭಾಗವಹಿಸಿದ್ದರು.