
ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಪಂ ಕಚೇರಿ ಸಮೀಪದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಹೋರಾಟ ನಡೆಸಿದರು.ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕ್ರೈಸ್ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ ಮೂರರಿಂದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಅಲ್ಲದೆ, ಸರ್ಕಾರ 22.05.2026ರಂದು ಪ್ರಕಟಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನೂ ಸಮರ್ಪಕವಾಗಿ ಜಾರಿಗೊಳಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸುಮಾರು ಒಂದು ದಶಕದ ನಂತರ ಕನಿಷ್ಠ ವೇತನ ಪರಿಷ್ಕರಣೆ ಮಾಡಲಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪರಿಷ್ಕೃತ ವೇತನ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ರಾಯಚೂರು ಜಿಲ್ಲೆಯ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಕಾರ್ಮಿಕರಿಗೆ ಪರಿಷ್ಕೃತ ವೇತನ ಪಾವತಿಯಾಗಿದ್ದರೂ, ಇತರೆ ಇಲಾಖೆಗಳ ವಸತಿ ನಿಲಯಗಳಲ್ಲಿ ದುಡಿಯುವ ಕಾರ್ಮಿಕರಿಗೆ ಈ ಸೌಲಭ್ಯ ದೊರೆಯದಿರುವುದು ತಾರತಮ್ಯಕ್ಕೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅಡುಗೆ ತಯಾರಿಸುವವರು, ಅಡುಗೆ ಸಹಾಯಕರು, ಸ್ವಚ್ಛತಾ ಸಿಬ್ಬಂದಿ ಹಾಗೂ ಕಾವಲು ಸಿಬ್ಬಂದಿ ಹಗಲಿರುಳು ದುಡಿ ಯುತ್ತಿದ್ದಾರೆ. ಆದರೆ, ಅವರಿಗೆ ಸಕಾಲಕ್ಕೆ ವೇತನ, ಇಪಿಎಫ್, ಇಎಸ್‌ಐ, ವಾರದ ರಜೆ ಹಾಗೂ ಉದ್ಯೋಗ ಭದ್ರತೆ ದೊರೆಯುತ್ತಿಲ್ಲ. ಇದರಿಂದ ಕಾರ್ಮಿಕರ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ದೂರಿದರು.
ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕೂಡಲೇ ಮಧ್ಯ ಪ್ರವೇಶಿಸಿ ಕಾರ್ಮಿಕರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.