- ಪ್ರಿಪರೇಟರಿಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಗಳಿಸಿದ 100 ಮಕ್ಕಳಿಗೆ ತರಬೇತಿ- - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪರೀಕ್ಷಾ ತರಬೇತಿ ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ 85 ಪ್ರೌಢಶಾಲೆಗಳಿದ್ದು, ಈ ಶಾಲೆಗಳಲ್ಲಿ ಕಲಿಯುತ್ತಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ಈಗ ಆಗಿರುವ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 100 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಮುಂಬರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಲು ಬೇಕಾದ ಅಗತ್ಯ ತರಬೇತಿ ಮಕ್ಕಳಿಗೆ ಕಲಿಸಿ ಕೊಡಲಾಗುವುದು ಎಂದರು.
ಚನ್ನಗಿರಿ ತಾಲೂಕು ಶೈಕ್ಷಣಿಕ ಕ್ಷೇತ್ರದಲ್ಲಿ ಅತಿ ಹೆಚ್ಚು ಪ್ರಗತಿ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ತಾಲೂಕಿನಲ್ಲಿರುವ ಎಲ್ಲ ಪ್ರೌಢಶಾಲೆಗಳಲ್ಲಿ ರಾತ್ರಿ ತರಗತಿಗಳನ್ನು ನಡೆಸಲಾಗುತ್ತಿದೆ. ಕಳೆದ ವರ್ಷ ತಾಲೂಕಿನ ವಿದ್ಯಾರ್ಥಿ 622 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಈಗ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗಳನ್ನು ತಯಾರು ಮಾಡುವ ಜವಾಬ್ದಾರಿ ನಮ್ಮಗಳ ಮೇಲಿದೆ. ಆ ನಿಟ್ಟಿನಲ್ಲಿ ತರಬೇತಿ ಆಯೋಜಿಸಲಾಗಿದೆ ಎಂದರು.₹1 ಲಕ್ಷ ಬಹುಮಾನ ಗಳಿಸಿ:
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಚನ್ನಗಿರಿ ತಾಲೂಕು ಉತ್ತಮ ಸಾಧನೆ ಮಾಡುವ ನಿಟ್ಟಿನಲ್ಲಿ ಪಾಸಿಂಗ್ ಪ್ರಾಕ್ಟಿಸ್ ಎಂಬ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ ಶೇ.100ಕ್ಕೆ 100ರಷ್ಟು ಅಂಕ (625 ಅಂಕ)ಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ತಲಾ ₹1 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳು ಶ್ರಮವಹಿಸಿ, ಈ ಬಹುಮಾನ ಗಿಟ್ಟಿಸಿಕೊಂಡು ತಾಲೂಕಿಗೆ ಉತ್ತಮ ಹೆಸರು ತರಬೇಕು ಎಂದರು.ತರಬೇತಿ ಶಿಬಿರದಲ್ಲಿ ಸಂಪನ್ಮೂಲ ಶಿಕ್ಷಕರಾದ ಷಣ್ಮುಖ, ಕೃಷ್ಣಮೂರ್ತಿ, ಜಯಪ್ರಕಾಶ್, ಪಿ.ವಿ.ಸ್ವಾಮಿ, ಷಡಾಕ್ಷರಿ, ರಾಮಚಂದ್ರಪ್ಪ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.
- - - -6ಕೆಸಿಎನ್ಜಿ1.ಜೆಪಿಜಿ:ಚನ್ನಗಿರಿ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಪರೀಕ್ಷಾ ತರಬೇತಿ ಕಾರ್ಯಾಗಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಮಾತನಾಡಿದರು.