ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕು ಕಾನೂನು ಸೇವಾ ಸಮಿತಿಸ ಆರೋಗ್ಯ ಇಲಾಖೆ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ನಡೆದ ಜಾಥಾಗೆ ಜೆಎಂಎಫ್‌ಸಿ ನ್ಯಾಯಾಲಯದ ಎರಡನೇ ಅಪರ ಸಿವಿಲ್ ನ್ಯಾಯಾಧೀಶ ಕೆ.ಗೋಪಾಲಕೃಷ್ಣ ಚಾಲನೆ ನೀಡಿ ಮಾತನಾಡಿ, ಇದು ಎಚ್ಐವಿ ಮತ್ತು ಏಡ್ಸ್ ವಿರುದ್ಧದ ಹೋರಾಟದಲ್ಲಿ ಜನರನ್ನು ಒಗ್ಗೂಡಿಸುವ ಆಂದೋಲನವಾಗಿದೆ ಎಂದರು.
ಏಡ್ಸ್ ಸೋಂಕಿಗೆ 20 ರಿಂದ 40 ವರ್ಷ ಒಳಗಿನವರ ಸಂಖ್ಯೆಯೇ ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಉತ್ತಮ ಬದುಕು ಕಟ್ಟಿಕೊಳ್ಳಬೇಕಾದ ಯುವ ಸಮೂಹ ನಿರ್ಲಕ್ಷ್ಯ ಮತ್ತು ಮಾಹಿತಿ ಕೊರತೆಯಿಂದ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುವ ಮೂಲಕ ರೋಗ ತಂದುಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ರವಿಶಂಕರ್ ಮಾತನಾಡಿ, ಭಯಾನಕ ಏಡ್ಸ್ ಕಾಯಿಲೆ ಸಂಪೂರ್ಣ ನಿರ್ಮೂಲನೆ ಮಾಡಲು ಸರ್ಕಾರ ಮತ್ತು ಆರೋಗ್ಯ ಇಲಾಖೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶ್ರಮಿಸುತ್ತಿದೆ. ಇದಕ್ಕೆ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ಮನವಿ ಮಾಡಿದರು.
ನಂತರ ಆಶಾ ಕಾರ್ಯಕರ್ತೆಯರು ಮತ್ತು ವರ್ಧಮಾನ್ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.