ಕುಶಾಲನಗರ: ಕಾವೇರಿ ನದಿ ನೀರು ಹಂಚಿಕೆ ಅವೈಜ್ಞಾನಿಕವಾಗಿದ್ದು ನದಿ ನೀರಿನ ವಾಸ್ತವ ಅಂಶವನ್ನು ಸಂಗ್ರಹಿಸಿ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲು ತಯಾರಿ ನಡೆಸಲಾಗಿದೆ ಎಂದು ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್ ಕೆ ರಾಮು ತಿಳಿಸಿದ್ದಾರೆ.
ತಜ್ಞರ ಸಮಿತಿಯ ಮೂಲಕ ಕಾವೇರಿ ಜಲಾನಯನ ಪ್ರದೇಶಗಳ ರೈತರ ಸ್ಥಿತಿಗತಿ ಮತ್ತು ಅವರ ಸಮಸ್ಯೆಗಳ ಬಗ್ಗೆ ಅವಲೋಕಿಸಿ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯುವ ಯತ್ನ ನಡೆಯಲಿದೆ ಎಂದರು. ಕೊಡಗು ಜಿಲ್ಲೆಗೆ ಭೇಟಿ ನೀಡಿದ ತಂಡ ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ನಂತರ ಜಲಾನಯನ ಪ್ರದೇಶಗಳಲ್ಲಿ ಮತ್ತು ಹಾರಂಗಿ ಅಣೆಕಟ್ಟು ಪ್ರದೇಶಗಳಲ್ಲಿ ವೀಕ್ಷಣೆ ನಡೆಸಿದೆ ಎಂದು ಹೇಳಿದರು.
ತಂಡದಲ್ಲಿ ಉಪಸ್ಥಿತರಿದ್ದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಮಿತಿ ಹಿರಿಯ ನಿವೃತ್ತ ಅಧಿಕಾರಿಗಳು ತಜ್ಞರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಪ್ರವಾಸ ಮಾಡಿ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸುತ್ತದೆ. ನಂತರ ಸುಪ್ರೀಂಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸುತ್ತದೆ ಎಂದು ಮಾಹಿತಿ ನೀಡಿದರು.ರಾಜ್ಯದಲ್ಲಿ ಕಾವೇರಿ ನೀರಿನ ವ್ಯಾಜ್ಯದಿಂದ ಕುಡಿಯುವ ನೀರಿಗೆ ಕೂಡ ಹಾಹಾಕಾರ ಉಂಟಾಗಿದೆ ಎಂದು ಸ್ವಾಮೀಜಿ ಹೇಳಿದರು. ಮೇಕೆದಾಟು ಯೋಜನೆ ಕೂಡಲೇ ಜಾರಿಗೆ ಬರಬೇಕು , ತಮಿಳುನಾಡು ಸರ್ಕಾರ ಸೇರಿದಂತೆ ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಬೇಕು. ಕಾವೇರಿ ವ್ಯಾಜ್ಯದಲ್ಲಿ ಹಳೆಯ ತೀರ್ಮಾನಗಳನ್ನು ಒಪ್ಪಲು ಸಾಧ್ಯವಿಲ್ಲ. ಇದರಿಂದ ರಾಜ್ಯಕ್ಕೆ ರಾಜ್ಯದ ರೈತರಿಗೆ ನೀರಿನ ಕಂಟಕ ಉಂಟಾಗಿದೆ ಎಂದರು.
ಕಾವೇರಿ ನದಿ ರಕ್ಷಣಾ ಸಮಿತಿಯ ಪ್ರಮುಖರು ಕುಶಾಲನಗರದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕರಾದ ಎಂ ಎನ್ ಚಂದ್ರಮೋಹನ್ ಅವರನ್ನು ಗೌರವಿಸಿದರು.ಸೋಮವಾರ ಜಿಲ್ಲೆಗೆ ಭೇಟಿ ನೀಡಿದ 50ಕ್ಕೂ ಅಧಿಕ ಸಂಘ ಸಂಸ್ಥೆಗಳ ಪ್ರಮುಖರು ಮಂಗಳವಾರ ಬೆಳಗ್ಗೆ ತಲಕಾವೇರಿ ಕ್ಷೇತ್ರಕ್ಕೆ ತೆರಳಿ ಪೂಜೆ ನೆರವೇರಿಸಿ ರಾಜ್ಯದ ಸುಭಿಕ್ಷೆಗೆ ಪ್ರಾರ್ಥನೆ ಸಲ್ಲಿಸಿದರು.