ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯ 131 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭಗೊಂಡಿದ್ದು, ಶುಕ್ರವಾರ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಿತು.ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರದ ವಿ.ಬಿ.ದರಬಾರ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಿದರು. ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಘಟ್ಟವಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೇ ಪರೀಕ್ಷಾ ನಿಯಮಗಳನ್ನು ಅನುಸರಿಸಿ, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಸೂಚನೆ ನೀಡಿದರು.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯ, ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿ.ಸಿ ಟಿವಿ ಮತ್ತು ವೆಬ್‌ಕಾಸ್ಟಿಂಗ್ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಪೋಲಿಸ್ ಭದ್ರತಾ ವ್ಯವಸ್ಥೆ ಕುರಿತು ಮಾಹಿತಿ ಪಡೆದರು.ಇನ್ನು, ಜಿಪಂ ಸಿಇಒ ರಿಷಿ ಆನಂದ ಪರೀಕ್ಷೆಗಳು ನಡೆದಿರುವ ನಿಮಿತ್ಯ ನಗರದ ಜಿಲ್ಲಾ ಪಂಚಾಯಿತಿಯ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರ, ಪಿ.ಡಿ.ಜೆ ಪ್ರೌಢ ಶಾಲೆ, ಬಂಜಾರಾ ಪ್ರೌಢಶಾಲೆ ಮತ್ತು ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಶಾಲೆ, ಬಿಡಿಎ ಸೊಸೈಟಿ ಬಾಲಕಿಯರ ಶಾಲೆ ಮತ್ತು ಸರ್ಕಾರಿ ಬಾಲಕಿಯರ ಶಾಲೆಗಳ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯಲ್ಲಿ ೧೩೧ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಜಿಲ್ಲಾ ಪಂಚಾಯಿತಿಯಲ್ಲಿ ಸ್ಥಾಪಿಸಿರುವ ವೀಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ, ಗಣಕಯಂತ್ರ, ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ಹಾಗೂ ಇಂಟರ್ನೆಟ್ ವ್ಯವಸ್ಥೆ ಕುರಿತು ವೀಕ್ಷಿಸಿದರು. ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ಕಾರ್ಯನಿರ್ವಹಿಸಬೇಕು. ಹೈ-ಸ್ಪೀಡ್ ಇಂಟರ್ ನೆಟ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಸ್ಥಗಿತಗೊಳ್ಳದಂತೆ ನೋಡಿಕೊಳ್ಳುವುದು, ಒಂದು ವೇಳೆ ಸಿಸಿಟಿವಿ ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಲೋಪಗಳು ಕಂಡು ಬಂದರೆ ಕೂಡಲೇ ನೇರವಾಗಿ ತಮ್ಮ ಗಮನಕ್ಕೆ ತರುವಂತೆಯೂ ಮತ್ತು ಉದ್ಭವಿಸುವ ಸಮಸ್ಯೆಗಳ ಕುರಿತು ಸ್ಪಷ್ಟನೆ ನೀಡುವಂತೆ ಹೇಳಿದರು.ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಟಿ.ಎಸ್.ಕೊಲ್ಹಾರ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಸ್ಥಳದಲ್ಲಿದ್ದರು.
ಬಾಕ್ಸ್ಮೊದಲ ದಿನ ೧೦೮೯ ವಿದ್ಯಾರ್ಥಿಗಳ ಗೈರು
ಜಿಲ್ಲೆಯ ವಿವಿಧ 131 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಜರುಗಿದ ಎಸ್.ಎಸ್.ಎಲ್.ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆಗೆ ೪೧,೨೭೬ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ೪೦,೧೮೭ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಮೊದಲ ದಿನವೇ ೧,೦೮೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.