ಕನ್ನಡಪ್ರಭ ವಾರ್ತೆ ಮಡಿಕೇರಿ
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಭಾರತೀಯ ಜನತಾ ಪಾರ್ಟಿಗೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದಾರೆ. ಅತ್ಯಧಿಕ ಮತಗಳ ಅಂತರದಿಂದ ಯದುವೀರ್ ಅವರನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಕ್ಕ ಉತ್ತರ ನೀಡಲು ಮುಂದಾಗಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಜನ ಮೆಚ್ಚಿದ್ದಾರೆ. ಯದುವೀರ್ ಅವರು ರಾಜ ವಂಶಸ್ಥ, ಯಾರ ಕೈಗೂ ಸಿಗುವುದಿಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಯದುವೀರ್ ಅವರು ಅತ್ಯಂತ ಸರಳ ಜೀವಿ ಮತ್ತು ಅಭಿವೃದ್ಧಿಪರ ಚಿಂತನೆ ಇರುವ ವ್ಯಕ್ತಿ ಎನ್ನುವುದು ಈಗಾಗಲೇ ಸಾಬೀತಾಗಿದೆ ಎಂದು ಹೇಳಿದರು.ಚುನಾವಣೆಯಲ್ಲಿ ಸ್ಪರ್ಧೆ ಸಹಜವಾಗಿರುತ್ತದೆ, ಪ್ರತಿಸ್ಪರ್ಧಿಯನ್ನು ನಿರ್ಲಕ್ಷಿಸಿ ನಾವು ಮೈಮರೆಯುವುದಿಲ್ಲ, ಯದುವೀರ್ ಅವರ ಗೆಲುವಿಗಾಗಿ ನಿರಂತರ ಶ್ರಮ ವಹಿಸುತ್ತೇವೆ. ಈಗಾಗಲೇ ಬೂತ್ ಮಟ್ಟದಿಂದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ವರೆಗೂ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಾಂಗ್ರೆಸ್ ಅಭಿವೃದ್ಧಿ ಮಾಡಿಲ್ಲ:ಕಳೆದ 10 ತಿಂಗಳ ಅಭಿವೃದ್ಧಿ ಕಾರ್ಯಗಳೇ ಲೋಕಸಭಾ ಚುನಾವಣೆಯಲ್ಲಿ ತಮಗೆ ಶ್ರೀರಕ್ಷೆಯಾಗಲಿದೆ ಎಂದು ಕಾಂಗ್ರೆಸಿಗರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಮತ್ತು ಈ ಹಿಂದಿನ ಸರ್ಕಾರದ ಅನುದಾನದ ಕಾಮಗಾರಿಗಳು ಎನ್ನುವುದು ಜನರಿಗೆ ಈಗಾಗಲೇ ಅರ್ಥವಾಗಿದೆ. ನೂತನ ಶಾಸಕರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದಿರುವುದು ಮತ್ತು ಈ ಹಿಂದಿನ ಬಿಜೆಪಿ ಶಾಸಕರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿಗೆ ಶ್ರೀರಕ್ಷೆಯಾಗಲಿದೆ ಎಂದು ರವಿ ಕಾಳಪ್ಪ ತಿಳಿಸಿದರು.
ಮುಖ್ಯಮಂತ್ರಿಗೆ ಆತಂಕ:ರಾಜ್ಯದಲ್ಲಿ ಕಡಿಮೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದರೆ ಸರ್ಕಾರ ಪತನವಾಗುತ್ತದೆ ಎನ್ನುವ ಆತಂಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಇದೇ ಕಾರಣಕ್ಕೆ ಮೈಸೂರು- ಕೊಡಗು ಕ್ಷೇತ್ರ ಸೇರಿದಂತೆ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಪ್ರಯತ್ನದಲ್ಲಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಈ ಪ್ರಯತ್ನ ಫಲ ನೀಡುವುದಿಲ್ಲ ಎಂದು ಭವಿಷ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಜಿಲ್ಲಾ ವಕ್ತಾರ ಅರುಣ್ ಕುಮಾರ್ ಹಾಗೂ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಮತ್ತಿತರರಿದ್ದರು.