ಉಡುಪಿ: ಶಾಸ್ತ್ರೀಯ ಕಲಾವಿದರಿಗೆ ಪಂಚತಾರಾ ಆತಿಥ್ಯ, ಯಕ್ಷಗಾನ - ಜನಪದ ಕಲಾವಿದರಿಗೆ ಕಲ್ಯಾಣ ಮಂಟಪದಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯ ತಾರತಮ್ಯ ಸಲ್ಲದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ. ಎಲ್. ಸಾಮಗ ಹೇಳಿದ್ದಾರೆ. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಉಡುಪಿ ಜಿಲ್ಲೆ ವತಿಯಿಂದ ಕುಂಜಿಬೆಟ್ಟು ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಸಭಾಂಗಣದಲ್ಲಿ ಬುಧವಾರ ನಡೆದ ಸಾಧಕರೊಂದಿಗೆ ಸಂವಾದದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ನಿರ್ಮಲಾ ಮಠಪತಿ, ಒಂದು ದೇಶದ ಸಾಂಸ್ಕೃತಿಕ ಶ್ರೀಮಂತಿಕೆಯು ಆ ದೇಶದ ಅಭಿವೃದ್ಧಿಯ ಮಾನದಂಡ. ಕಲೆ ನಮ್ಮ ನಿಜವಾದ ಆಸ್ತಿ ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ರೊ. ಸಾಮಗರವರು ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ ಎಂದರು.
ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಪ್ರಾಂಶುಪಾಲ ವಿದ್ಯಾವಂತ ಆಚಾರ್ಯ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.