ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಸಹಯೋಗದೊಂದಿಗೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷ ವಾಕ್ಯದೊಂದಿಗೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ, ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯಗತ್ಯ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಅವರು ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಸಹಯೋಗದೊಂದಿಗೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನವನ್ನು ಉದ್ಘಾಟಿಸಿ ಮಾತನಾಡಿದರು.
2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯಲ್ಲಿ ಯೋಗ ದಿನವನ್ನು ಪ್ರಸ್ತಾವಿಸಿದ ಫಲವಾಗಿ 177 ದೇಶಗಳ ಬೆಂಬಲದೊಂದಿಗೆ ಕಳೆದ 10 ವರ್ಷಗಳಿಂದ ಭಾರತ ಸಹಿತ ನೂರಾರು ದೇಶಗಳು ಅಂತಾರಾಷ್ಟ್ರೀಯ ಯೋಗ ದಿನವನ್ನು ಜೂನ್ 21ರಂದು ಆಚರಿಸುತ್ತಿರುವುದು ಐತಿಹಾಸಿಕ ದಾಖಲೆಯಾಗಿದೆ. ಬದುಕಿನ ಆಸೆ ಆಕಾಂಕ್ಷೆಗಳು ಈಡೇರಲು ಆರೋಗ್ಯ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಶಿಸ್ತುಬದ್ಧ ಜೀವನ ಕ್ರಮದ ಜೊತೆಗೆ ಯೋಗಾಭ್ಯಾಸದ ಕೊಡುಗೆ ಮಹತ್ವಪೂರ್ಣ ಎಂದರು.
ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಉಡುಪಿ ಸಮಿತಿಯ ಯೋಗ ಶಿಕ್ಷಕ ನಾಗರಾಜ ಕಿಣಿ, ಯೋಗದ ಕುರಿತು ಮಾಹಿತಿ ನೀಡಿ ಯೋಗ ತರಗತಿಯನ್ನು ನಡೆಸಿಕೊಟ್ಟರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಯೋಗ ದಿನಾಚರಣೆಯ ಜಿಲ್ಲಾ ಸಂಚಾಲಕರಾದ ವಿಜಯಕುಮಾರ್ ಉದ್ಯಾವರ, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ಯೋಗ ಶಿಕ್ಷಕಿ ಶೋಭಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.