ಜಿಲ್ಲಾ ಮಟ್ಟದ ಯುವ ಸಂಸತ್-೨೦೨೬ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಕೊತ್ತೂರು ಜಿ. ಮಂಜುನಾಥ್ ಸಲಹೆ
ಸಂಸತ್ತು, ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಕಲಾಪಗಳು ಕೇವಲ ಚರ್ಚೆ ನಡೆಸುವ ಸ್ಥಳಗಳಲ್ಲ. ಅವು ಜನರ ಧ್ವನಿಗೆ ಸ್ಪಂದಿಸುವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪವಿತ್ರ ವೇದಿಕೆಗಳಾಗಿವೆ. ಯುವಜನತೆ ಪ್ರಜಾಪ್ರಭುತ್ವದ ನಿಜವಾದ ಶಕ್ತಿಯಾಗಿ ರೂಪುಗೊಂಡು ರಾಜಕೀಯ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಹಾಗೂ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯ ಎಂದು ಕೋಲಾರ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.
ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಾನೂನು ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್-೨೦೨೬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿರುವ ಯುವ ಸಂಸತ್ ಕಾರ್ಯಕ್ರಮ ಅತ್ಯಂತ ಅದ್ಭುತವಾಗಿದೆ. ಸಂಸತ್ತು ಹಾಗೂ ವಿಧಾನಸಭೆಯಲ್ಲಿ ಕಲಾಪಗಳು ನಡೆಯುವ ರೀತಿಯಲ್ಲಿಯೇ ಅತ್ಯಂತ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ರೂಪಿಸಿರುವುದು ಸಂತೋಷದ ವಿಚಾರವಾಗಿದೆ. ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವೈಖರಿ, ಪ್ರಜಾಪ್ರಭುತ್ವದ ಆಶಯಗಳು ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ ಎಂದು ಪ್ರಶಂಸಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದಿದ್ದರೂ ಇತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಬೇಕಿದೆ. ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ವಿಧಾನಸಭೆ ಮತ್ತು ಲೋಕಸಭೆಯಂತಹ ರಾಜಕೀಯ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಿಗೆ ಪ್ರವೇಶಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು.
ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳು ಹಾಗೂ ಸಂವಿಧಾನದ ಪೀಠಿಕೆಯಲ್ಲಿ ಅಡಕವಾಗಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಇಂದಿನಿಂದಲೇ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಯ ಕುರಿತು ಆಳವಾದ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.