ಡ್ರಗ್ಸ್ ಎಂಬ ಮಾದಕ ವಸ್ತು ವಿಶ್ವದ ಪ್ರತಿಯೊಂದು ದೇಶದ ಯುವಜನರ ಮೇಲೆ ಪರಿಣಾಮ ಬೀರುತ್ತಿದೆ. ವ್ಯಸನಿಗಳ ದೇಹದ ಜೀವಕೋಶ ಮತ್ತು ಮನಸ್ಸುಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕ್ಷಣಿಕ ಸುಖಕ್ಕಾಗಿ ತಮ್ಮ ಸುಖ ಜೀವನವನ್ನು ಕಳೆದುಕೊಳ್ಳಬೇಡಿ.
ಕನ್ನಡಪ್ರಭ ವಾರ್ತೆ ಮಂಡ್ಯ
ಡ್ರಗ್ಸ್ ಎಂಬ ಮಾದಕ ವಸ್ತು ವಿಶ್ವದ ಪ್ರತಿಯೊಂದು ದೇಶದ ಯುವಜನರ ಮೇಲೆ ಪರಿಣಾಮ ಬೀರುತ್ತಿದೆ. ವ್ಯಸನಿಗಳ ದೇಹದ ಜೀವಕೋಶ ಮತ್ತು ಮನಸ್ಸುಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕ್ಷಣಿಕ ಸುಖಕ್ಕಾಗಿ ತಮ್ಮ ಸುಖ ಜೀವನವನ್ನು ಕಳೆದುಕೊಳ್ಳಬೇಡಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಯುವಕರಿಗೆ ಸಲಹೆ ನೀಡಿದರು.
ಭಾನುವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮೆಗಾ ಮ್ಯಾರಾಥಾನ್ ಜಾಗೃತಿಗಾಗಿ, ಶಕ್ತಿಗಾಗಿ, ನಶೆ ಮುಕ್ತ ಮಂಡ್ಯಕ್ಕಾಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಯೊಂದು ದೇಶಕ್ಕೂ ಯುವಜನರೇ ಶಕ್ತಿ. ಮೊದಲು ಯುವಸಮೂಹ ಡ್ರಗ್ಸ್ ಕುರಿತು ಜಾಗೃತರಾಗಬೇಕು. ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸಬೇಕು ಎಂದರು.
ಮನಸ್ಸು ವ್ಯಸನದಿಂದ ಮುಕ್ತವಾದರೆ ಮಾತ್ರ ವ್ಯಸನ ಮುಕ್ತ ಸಮಾಜ ನಿರ್ಮಿಸಲು ಸಾಧ್ಯ. ದೈಹಿಕವಾಗಿ ಸದೃಢವಾಗಿದ್ದರೆ ಮಾನಸಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ. ಸಾಮಾಜಿಕ ಮತ್ತು ನಾಗರಿಕ ರಕ್ಷಣೆಯ ಕೆಲಸವನ್ನು ಪೊಲೀಸ್ ಇಲಾಖೆ ಉತ್ತಮವಾಗಿ ಮಾಡುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿ, ನಶೆ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಮೆಗಾ ಮ್ಯಾರಾಥಾನ್ ಆಯೋಜಿಸಿದ್ದು, ಯುವಕರು ಓದು, ಉದ್ಯೋಗ, ಉತ್ತಮ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಎಲ್ಲರೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಹಾಸ್ಯನಟರಾದ ನಟರಾಜ್ (ಗಿಲ್ಲಿ ನಟ) ಮಾತನಾಡಿ, ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ. ದುಶ್ಚಟಗಳಿಂದ ದೂರವಿರಬೇಕು. ಪೊಲೀಸ್ ಇಲಾಖೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮ್ಯಾರಾಥಾನ್ ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸುತ್ತಿದ್ದಾರೆ. ಮಾದಕ ವಸ್ತುಗಳ ವಿರುದ್ಧ ಯುವಜನರು ಸಿಡಿದೇಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಇ.ತಿಮ್ಮಯ್ಯ, ಗಂಗಾಧರ ಸ್ವಾಮಿ, ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್‌ಕುಮಾರ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.