ಹೊಸಪೇಟೆ: ಭಾರತವು ಸಂವಿಧಾನ ಬದ್ಧ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದೆ. ಮತದಾನದ ಮೂಲಕ ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವ ಮತದಾರರ ಪಾತ್ರ ಹಿರಿದಾಗಿದೆ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ. ಕುಮಾರಸ್ವಾಮಿ ಹೇಳಿದರು.
ಪ್ರತಿ ನಾಗರಿಕನೂ ಸಂವಿಧಾನದ ಪ್ರಸ್ತಾವನೆ, ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದಿರಬೇಕು. ಭ್ರಷ್ಟಾಚಾರ ಮುಕ್ತ ರಾಷ್ಟ್ರ ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕಾದರೆ ಕಡ್ಡಾಯ ಮತದಾನ ಅಗತ್ಯವಾಗಿದೆ ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, 2011ರಿಂದ ಪ್ರತಿವರ್ಷ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಈ ಬಾರಿ ''''''''ನನ್ನ ಭಾರತ, ನನ್ನ ಮತ'''''''' ಎಂಬ ಘೋಷವಾಕ್ಯದಡಿ ಅರಿವು ಮೂಡಿಸಲಾಗುತ್ತಿದೆ. 18 ವರ್ಷ ಮೇಲ್ಪಟ್ಟ ಎಲ್ಲ ಯುವಜನರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ನೆರೆ ದೇಶಗಳಿಗಿಂತ ಭಾರತದಲ್ಲಿ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯಿದ್ದು, ಇದರ ರಕ್ಷಣೆಗೆ ಯುವ ಸಮೂಹ ಸಕ್ರಿಯವಾಗಿ ಮತದಾನದಲ್ಲಿ ಭಾಗವಹಿಸಬೇಕು ಎಂದರು.ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಮತ್ತು ಬೂತ್ ಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್ಓಗಳಿಗೆ ಸನ್ಮಾನಿಸಲಾಯಿತು.ಎಸ್ಪಿ ಎಸ್. ಜಾಹ್ನವಿ, ಜಿಪಂ ಸಿಇಒ ಅಲಿ ಅಕ್ರಮ್ ಷಾ, ಉಪವಿಭಾಗಾಧಿಕಾರಿ ವಿವೇಕಾನಂದ, ಪೌರಾಯುಕ್ತ ಶಿವಕುಮಾರ್ ಮತ್ತಿತರರಿದ್ದರು.