ಕನ್ನಡಪ್ರಭ ವಾರ್ತೆ ಕೋಲಾರನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದರು.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ಮಾತನಾಡಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ, ಕೇಂದ್ರದಲ್ಲಿ ಮೋದಿ ಸರ್ಕಾರವು ಲಕ್ಷಾಂತರ ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುತ್ತಿದ್ದು ದೇಶದಲ್ಲಿ ಹಲವಾರು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ವಿದ್ಯಾರ್ಥಿಗಳಿಗೆ ಇದರಿಂದಾಗಿ ಬಹಳ ಅನನುಕೂಲಗಳಾಗಿವೆ. ಕೂಡಲೇ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರವಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು ಮಾತನಾಡಿ, ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಎರಡು ವರ್ಷಗಳ ಕಾಲ ತಯಾರಿ ಮಾಡಿಕೊಂಡಿದ್ದಾರೆ. ಪದೇಪದೇ ನೀಟ್ ಪತ್ರಿಕೆ ಸೋರಿಕೆಯಾಗುವುದರಿಂದ ವಿದ್ಯಾರ್ಥಿಗಳು ಬಹಳಷ್ಟು ನೋವಿನಲ್ಲಿ ಇದ್ದಾರೆ. ಇದಕ್ಕೆ ಕಾರಣವಾಗಿರುವ ಕೇಂದ್ರದ ಮೋದಿ ಸರ್ಕಾರವು ಇಂತಹ ಸಮಸ್ಯೆಯ ವಿರುದ್ಧ ಧ್ವನಿಯಾಗಬೇಕು. ಕೂಡಲೇ ವ್ಯವಸ್ಥೆ ಸರಿಪಡಿಸಬೇಕು ಇಲ್ಲದಿದ್ದರೆ ದೆಹಲಿಯ ಸಂಸತ್ತು ಭವನದ ಮುಂದೆ ದೇಶಾದ್ಯಂತ ಇರುವ ಯುವ ಕಾಂಗ್ರೆಸ್ ಘಟಕಗಳು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದರು.ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಹೈಲ್, ಮುಖಂಡರಾದ ರೋಹಿತ್, ಯತೀಶ್, ಪ್ರಶಾಂತ್, ಗುಲಾಮ್, ಇಮ್ರಾನ್, ಫರೀದ್ ಇದ್ದರು.
೧೪ಕೆಎಲ್‌ಆರ್-೩
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೋಲಾರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.