ಗದಗ: ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್, ಅಬಕಾರಿ ಸುಂಕ ಹಾಗೂ ಸಿಲಿಂಡರ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ರಸ್ತೆ ಮೇಲೆ ಕಟ್ಟಿಗೆ ಒಲೆಯಲ್ಲಿ ಚಹಾ ಮಾಡಿ ಕುಡಿಯುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು. ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಪೆಟ್ರೋಲ್ , ಡೀಸೆಲ್ ಮತ್ತು ಸಿಲಿಂಡರ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ಬಿಜೆಪಿ ಕಂಟಕವಾಗಿ ಪರಿಣಮಿಸಿದೆ. 2014ರ ಮೊದಲು ಜನಪರವಾಗಿದ್ದ ಪ್ರಧಾನಿ ಮನಮೋಹನ್‌ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ ಕಚ್ಚಾ ತೈಲದ ಬೆಲೆ ಅಧಿಕವಾಗಿದ್ದರೂ ಪೆಟ್ರೋಲ್, ಡೀಸೆಲ್‌ಗೆ ಅತ್ಯಧಿಕ ಸಬ್ಸಿಡಿ ನೀಡುವ ಮೂಲಕ ಜನರಿಗೆ ಹೊರೆಯಾಗದ ರೀತಿಯಲ್ಲಿ ದರವನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್, ಡೀಸೆಲ್‌ಗೆ ಸುಂಕ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಗದಗ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಡವರ ವಿರೋಧಿ ನೀತಿಗಳ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಬಿಜೆಪಿಯ ದುರಾಡಳಿತ ತಿಳಿಸಲು, ಪ್ರತಿಭಟನೆ ಹಮ್ಮಿಕೊಂಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕದೇ ಹೋದರೆ ಬಿಜೆಪಿ ವಿರುದ್ಧ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಹೇಳಿದರು.ಗದಗ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಬರೆ ಎಳೆಯುತ್ತಾ ಬಂದಿದೆ. ಪೆಟ್ರೋಲ್, ಡೀಸೆಲ್ ಮತ್ತು ಸಿಲಿಂಡರ್ ಬೆಲೆ ಏರಿಕೆ ಮಾಡಿ, ಬಡ ಜನರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದೆ. ಅಧಿಕಾರಕ್ಕೆ ಬರುವ ಮುನ್ನ ಅಚ್ಛೇ ದಿನ್ ಅಂತ ಪ್ರಧಾನಿ ಹೇಳಿದ್ರು. ಆದರೆ ಈವರೆಗೂ ಅಚ್ಛೇ ದಿನ್ ಬಂದಿಲ್ಲ ಎಂದು ಆಕ್ರೋಶ ಹೊರಹಾಕಿದರು. ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಮಾಜಿ ಅಧ್ಯಕ್ಷ ಪ್ರಭು ಬುರಬುರೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೀಲಮ್ಮ ಬೋಳನವರ, ಮುಖಂಡರಾದ ಬಸವರಾಜ ಸುಂಕಾಪೂರ, ಕೃಷ್ಣಾ ಪರಾಪೂರ, ಬಸವರಾಜ ಕಡೆಮನಿ, ಎಸ್.ಎನ್. ಬಳ್ಳಾರಿ, ಖಮರಸುಲ್ತಾನ್ ಸಮಾಜಿ, ಲಕ್ಷ್ಮೀ ಸಿದ್ದಮನಹಳ್ಳಿ, ವಸಂತ ಸಿದ್ದಮ್ಮನಹಳ್ಳಿ, ಅನಿಲ ಸಿದ್ದಮ್ಮನಹಳ್ಳಿ, ಲೋಕೇಶ ದೊಡ್ಡಮನಿ, ಕುಸುಮಾ ಬೆಳಗಟ್ಟಿ, ವೀಣಾ ಕಟ್ನಳ್ಳಿ, ಉಮರ್ ಫಾರೂಕ್ ಹುಬ್ಬಳ್ಳಿ, ಭಾಷಾಸಾಬ್ ಮಲ್ಲಸಮುದ್ರ ಇತರರು ಉಪಸ್ಥಿತರಿದ್ದರು.