ಕನ್ನಡಪ್ರಭ ವಾರ್ತೆ ಶಿವಮೊಗ್ಗ/ದಾವಣಗೆರೆ ಸತ್ಯ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಬೆಲೆ ಕೊಡುವುದಾದರೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಮತದಾರರ ಪಟ್ಟಿಯಲ್ಲಾದ ಅಕ್ರಮಗಳ ಬಗ್ಗೆ ಸಮಗ್ರ ತನಿಖೆಗೆ ಮುಂದಾಗಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಬುಧವಾರ ಪ್ರತಿಭಟಿಸಿದರು.
ಶಿವಮೊಗ್ಗದಲ್ಲಿ ನಿರುದ್ಯೋಗ ದಿನಾಚರಣೆ ಮಾಡುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸ್ ನಿಲ್ದಾಣದ ಬಳಿ ತರಕಾರಿ ಮಾರಾಟ ಮಾಡಿದರು. ಟ್ರಾಫಿಕ್‌ನಲ್ಲಿ ನಿಂತಿದ್ದ ವಾಹನ ಸವಾರರಿಗೆ ಟೀ, ಪೇಪರ್, ಬೋಂಡ ಮಾರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿ, ಮತಗಳ್ಳತನ ಮಾಡಿ ಗದ್ದುಗೆ ಹಿಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯುವಕರು, ರೈತರಿಗೆ ಪೂರಕವಾದ ಯೋಜನೆ ರೂಪಿಸದೆ ನಿರುದ್ಯೋಗ ಪ್ರಮಾಣ ಹೆಚ್ಚಿಸಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ನರೇಂದ್ರ ಮೋದಿ ಹೇಳಿದ್ದರು. ಆದರೆ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡಲಿಲ್ಲ. ಬದಲಿಗೆ ಈ ಹಿಂದಿನಿಂದ ಕಾಂಗ್ರೆಸ್ ಬೆಳೆಸಿ, ಪೋಷಿಸಿದ್ದ ಸರ್ಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆಗಳನ್ನು ಮುಚ್ಚಿ ಲಕ್ಷಾಂತರ ಉದ್ಯೋಗಿಗಳು ಬೀದಿಗೆ ಬೀಳುವಂತೆ ಮಾಡಿದರು ಎಂದರು.