ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಡಿ. 26ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಗದಗ: ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಡಿ. 26ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗದಗ ಜಿಲ್ಲೆಯಲ್ಲಿ 2023ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರರು ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತರಿಗೆ ಕರ್ನಾಟಕ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು ಪಾವತಿಸಲಾಗುವುದು. ಡಿ.26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ 2024ರಿಂದ ಯೋಜನೆ ಜಾರಿಗೊಳ್ಳಲಿದ್ದು, ಅರ್ಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ದೊರೆಯಲಿದೆ. ಪದವೀಧರರಿಗೆ ರು.3000 ಮಾಸಿಕ ನಿರುದ್ಯೋಗ ಭತ್ಯೆಯನ್ನು ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರು.1500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ್ ಜೋಡಣೆಯ ಅಭ್ಯರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಯುವ ನಿಧಿ ನೋಂದಣಿಗೆ ಚಾಲನೆ: ಯುವನಿಧಿ ಯೋಜನೆಗೆ ಡಿ. 26ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಹಾಗೂ ಇತರೆ ಎಲ್ಲಾ ಸಚಿವ ಸಂಪುಟದ ಸಚಿವರು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಮತ್ತು ಇತರೆ ಗಣ್ಯ ಮಾನ್ಯರುಗಳ ಉಪಸ್ಥಿತಿಯಲ್ಲಿ ನೋಂದಣಿ ಪ್ರಕ್ರಿಯೆ ಚಾಲನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನೋಂದಣಿ ಪ್ರಕ್ರಿಯೆ ಅರ್ಹ ನಿರುದ್ಯೋಗಿಗಳು ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಿ ನೋಂದಣಿ ಮಾಡಬಹುದು. ಇದಲ್ಲದೇ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.