ಕನ್ನಡಪ್ರಭ ವಾರ್ತೆ ಮಡಿಕೇರಿ
ದೇಶದ ಅಭಿವೃದ್ಧಿಯು ಯುವಜನರನ್ನು ಅವಲಂಬಿಸಿದೆ. ಆದ್ದರಿಂದ ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಜನರಲ್ಲಿ ಕನಸು ಇರಬೇಕು. ಅದನ್ನು ಸಾಕಾರಗೊಳಿಸಲು ಪ್ರಯತ್ನಿಸಬೇಕು. ದುಶ್ಚಟಗಳಿಗೆ ಬಲಿಯಾಗಬಾರದು. ಯುವ ಜನರು ಉತ್ತಮ ರೀತಿಯಲ್ಲಿ ಬದುಕು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಸಂಕಲ್ಪ ಇರಬೇಕು ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ, ತಂಬಾಕು ಉಪಯೋಗಿಸುವುದರಿಂದ ಕ್ಯಾನ್ಸರ್, ಹೃದ್ರೋಗಕ್ಕೆ ಹಾಗೂ ನರರೋಗಕ್ಕೆ ತುತ್ತಾಗಬೇಕಾಗುತ್ತದೆ. ಜೊತೆಗೆ ಗ್ಯಾಂಗ್ರಿನ್ ಬರುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಲಹೆ ಮಾಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳಾ ಅವರು ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬುದನ್ನು ಮರೆಯಬಾರದು. ಇತ್ತೀಚಿನ ದಿನಗಳಲ್ಲಿ ಉಪಯೋಗಿಸುವ ಆಹಾರ, ಜೀವನ ಶೈಲಿಯಿಂದ ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ದೂರವಿರಲು ಪ್ರತೀ ನಿತ್ಯ ವ್ಯಾಯಾಮ ಮತ್ತು ನಡಿಗೆ ಮಾಡಬೇಕು ಎಂದರು.ವಿದ್ಯಾರ್ಥಿ ಜೀವನ ಚಿನ್ನದಂತ ದಿನವಾಗಿದ್ದು, ಯಾವುದೇ ಕೆಟ್ಟ ಅಭ್ಯಾಸಗಳಿಗೆ ತುತ್ತಾಗದೆ ಒಳ್ಳೆಯ ಜೀವನ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
ವಿಕಲಚೇತನ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ವಿಮಲ ಅವರು ಮಾತನಾಡಿ ಮಾದಕ ವ್ಯಸನಿಗಳ ಸಂಖ್ಯೆ ಕಡಿಮೆಯಾಗಬೇಕು. ತಂಬಾಕು ಉಪಯೋಗಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಎಚ್ಚರ ಇರಬೇಕು ಎಂದರು.ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಶ್ರೀನಿವಾಸ್, ತಾಲೂಕು ವೈದ್ಯಾಧಿಕಾರಿ ಡಾ. ಚೇತನ್, ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ.ವಿಜಯ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಗಾಯತ್ರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಆರ್.ಜಯಪ್ಪ ಇತರರು ಇದ್ದರು.