ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಎಸಗಿ ಅಪ್ರಾಪ್ತೆಯ ಆತ್ಮಹತ್ಯೆಗೆ ಕಾರಣನಾಗಿದ್ದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ಕೋರ್ಟ್ (ಎಫ್.ಟಿ.ಎಸ್.ಸಿ –1) ತೀರ್ಪು ನೀಡಿದೆ.
ತೀರ್ಥಹಳ್ಳಿ ತಾಲೂಕು ಮೂಲದ, 23 ವರ್ಷದ ಯುವಕ ಜೈಲುಶಿಕ್ಷೆಗೆ ಗುರಿಯಾದ ವ್ಯಕ್ತಿ. 2020ರಲ್ಲಿ ಘಟನೆ ನಡೆದಿತ್ತು. ಯುವಕನ ಲೈಂಗಿಕ ದೌರ್ಜನ್ಯದಿಂದ ಬೇಸತ್ತು, ಅಪ್ರಾಪ್ತೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಸಂಬಂಧ ಮೃತ ಬಾಲಕಿಯ ತಂದೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಕುರಿತಂತೆ ಹೊಸನಗರ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಬಿ.ಸಿ.ಗಿರೀಶ್ ತನಿಖೆ ನಡೆಸಿದ್ದರು. ಯುವಕನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್ ಶೀಟ್) ದಾಖಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶೆ ಲತಾ ಅವರು ನ.4ರಂದು ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹1.25 ಲಕ್ಷ ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಮೃತ ಬಾಲಕಿಯ ಕುಟುಂಬಕ್ಕೆ ₹17 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಹಾಗೂ ಮಮತ ವಾದ ಮಂಡಿಸಿದ್ದರು.