ಯುವಕರು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

KannadaprabhaNewsNetwork |  
Published : Oct 30, 2026, 01:45 AM IST
ಚಿತ್ರ 29ಬಿಡಿಆರ್55 | Kannada Prabha

ಸಾರಾಂಶ

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಇಂದಿನ ಯುವಕರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ವಾಕ್ ಚಾತುರ್ಯದಿಂದ ನೀವು ಕೂಡ ಒಂದು ದಿನ ಇಂತಹ ಕಲಾಪಗಳಲ್ಲಿ ಭಾಗವಹಿಸಲು ಅವಕಾಶ ಒದಗಿಬರಬಹುದು, ಈ ದಿಶೆಯಲ್ಲಿ ವಿದ್ಯಾರ್ಥಿಗಳು ಇಂತಹ ಅವಕಾಶ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿದರು.

ಕನ್ನಡಪ್ರಭ ವಾರ್ತೆ ಬೀದರ್

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಇಂದಿನ ಯುವಕರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ವಾಕ್ ಚಾತುರ್ಯದಿಂದ ನೀವು ಕೂಡ ಒಂದು ದಿನ ಇಂತಹ ಕಲಾಪಗಳಲ್ಲಿ ಭಾಗವಹಿಸಲು ಅವಕಾಶ ಒದಗಿಬರಬಹುದು, ಈ ದಿಶೆಯಲ್ಲಿ ವಿದ್ಯಾರ್ಥಿಗಳು ಇಂತಹ ಅವಕಾಶ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿದರು.

ಅವರು ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಸಂವಿಧಾನವು ಪ್ರಪಂಚದಲ್ಲಿಯೇ ಅಧ್ಬುತವಾದ ಪ್ರಜಾಪ್ರಭುತ್ವ ಹೊಂದಿದ ಸಂವಿಧಾನವಾಗಿದ್ದು, ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು.

ಬ್ರಿಟಿಷರ ಆಳ್ವಿಕೆಯಲ್ಲಿ ವಿದ್ಯಾವಂತರು ಹಾಗೂ ಪುರುಷರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗಿತ್ತು. ಆದರೆ ನಮ್ಮ ಸಂವಿಧಾನವು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮತದಾನದ ಹಕ್ಕನ್ನು ಕಲ್ಪಿಸಿದೆ. ನಮ್ಮ ಸಂವಿಧಾನವು ಅತ್ಯಂತ ಸುಂದರ, ಅಚ್ಚುಕಟ್ಟಾದ ಮತ್ತು ಇಡೀ ಪ್ರಪಂಚಕ್ಕೆ ಮಾದರಿಯಾದ ಸಂವಿಧಾನವಾಗಿದೆ. ಸಂಸತ್ತಿನಲ್ಲಿ ನಡೆಯುವ ಅಧಿವೇಶನದ ಕುರಿತು ಪ್ರಾತ್ಯಕ್ಷಿಕೆ ಮೂಲಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕಲಾಪಗಳಲ್ಲಿ ನಡೆಯುವ ಚರ್ಚೆಗಳು ಹಾಗೂ ಪ್ರಚಲಿತ ಸಮಸ್ಯೆಗಳ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಹಾಗೂ ವಿರೋಧ ಪಕ್ಷದ ಮದ್ಯ ಚರ್ಚೆಗಳು ಹೇಗೆ ನಡೆಯುತ್ತವೆ ಎಂಬುದನ್ನು ಮನವರಿಕೆ ಮಾಡಿಕೊಡಲು ವಿದ್ಯಾರ್ಥಿಗಳ ಮೂಲಕವೇ ಇಂದು ಸಂಸತ್ತನ್ನು ನಡೆಸಲಾಗುತ್ತಿದೆ. ಪ್ರಸ್ತುತ ಸದನದಲ್ಲಿ ನಡೆಯುವ ಕಾರ್ಯ ಕಲಾಪಗಳ ಕುರಿತು ವಿಸ್ತೃತವಾಗಿ ತಿಳಿದುಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ್ ಸಿಇಓ ಗಿಟ್ಟೆ ಮಾಧವ ವಿಠ್ಠಲರಾವ್ ಮಾತನಾಡಿ, ಶಾಲಾ-ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಕುರಿತು ಹೆಚ್ಚಿನ ಮಾಹಿತಿ ಇರುವುದಿಲ್ಲ. ಆದ್ದರಿಂದ ಸಂಸತ್ತಿನಲ್ಲಿ ನಡೆಯುವ ಕಾರ್ಯಕಲಾಪಗಳ ಕುರಿತು ಚರ್ಚೆ, ಪ್ರಶ್ನೆಗಳಿಗೆ ಉತ್ತರಿಸುವುದು ಸೇರಿದಂತೆ ತಮಗೆ ತಿಳಿವಳಿಕೆ ಮೂಡಿಸುವುದು ಅವಶ್ಯಕವಾಗಿರುವುದರಿಂದ ಇಂತಹ ಯುವ ಸಂಸತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ವಿದ್ಯಾರ್ಥಿಗಳು ಸಂವಿಧಾನದ ಅಂಗಗಳಾದ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಹಾಗೂ ಮಾಧ್ಯಮಗಳ ಕುರಿತು ತಿಳಿವಳಿಕೆ ಹಾಗೂ ಅನುಭವ ಪಡೆದುಕೊಳ್ಳಲು ಇದು ಒಂದು ಮುಕ್ತ ಅವಕಾಶವಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಯುವ ಸಂಸತ್ತು ನಡೆಯುವ ಮೊದಲು ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸಿಕೊಂಡು ಹೋಗುವ ದೃಷ್ಟಿಯಿಂದ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡು ಸಂಸತ್ ಸಭಾಧ್ಯಕ್ಷರನ್ನು ಆಯ್ಕೆ ಮಾಡಿದರು.

ಕಾರ್ಯಕಲಾಪ ನಡೆಯುವ ಮುಂಚೆ ವಂದೇ ಮಾತರಂ ಗಾಯನ ಹಾಗೂ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು. ಕಾರ್ಯಕಲಾಪಗಳಲ್ಲಿ ಪ್ರಶ್ನೋತ್ತರ, ಶೂನ್ಯವೇಳೆ, ಗಮನ ಸೆಳೆಯುವ ಮಸೂದೆಗಳ ಮಂಡನೆ ಹಾಗೂ ಚರ್ಚೆ, ಕಲಾಪಗಳ ಅನಿರ್ದಿಷ್ಟಾವಧಿ ಮುಂದೂಡಿಕೆ ಕುರಿತು ಕಾರ್ಯ ಕಲಾಪಗಳನ್ನು ನಡೆಸಲಾಯಿತು.

ಅಧಿವೇಶನದದಲ್ಲಿ ಪ್ರಥಮವಾಗಿ ಪ್ರಶ್ನೋತ್ತರ ಪ್ರಾರಂಭಿಸಿದ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅನುದಾನ ಬಳಕೆ ಕುರಿತು ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ಸದಸ್ಯರು ಚರ್ಚೆಗಳನ್ನು ನಡೆಸಿದರು.

ಪಂಚ ಗ್ಯಾರಂಟಿಗಳು, ಗಡಿಭಾಗದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಮೂಲಭೂತ ಸೌಕರ್ಯಗಳು, ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಹಾಗೂ ಕೆಪಿಎಸ್‌ಸಿ ನೇಮಕಾತಿ ಕುರಿತು ಚರ್ಚೆಗಳನ್ನು ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟರು.

ಯುವ ಸಂಸತ್ತು ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಉಪನಿರ್ದೇಶಕರಾದ ಯೋಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು