ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಜು.24 ಮತ್ತು 25ರಂದು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0 ಮೇದದೃಷ್ಟಿ’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಜು.24 ಮತ್ತು 25ರಂದು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0 ಮೇದದೃಷ್ಟಿ’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್ ತಿಳಿಸಿದರು.ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ನವೋದ್ಯಮ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಈ ಹ್ಯಾಕಥಾನ್ ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ಹಗಲು-ರಾತ್ರಿ ನಿರಂತರವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಹ್ಯಾಕಥಾನ್‌ನ ಮೊದಲ ದಿನ ತಂಡಗಳಿಗೆ ಎರಡು ಪ್ರಮುಖ ವಿಭಾಗಗಳಲ್ಲಿ ಸವಾಲಿನ ವಿಷಯಗಳನ್ನು ನೀಡಲಾಗುತ್ತದೆ. ಮೊದಲ ವಿಭಾಗ, ‘ಕೃತಕ ಬುದ್ಧಿಮತ್ತೆ ಮೂಲಕ ವೈದ್ಯಕೀಯ ಚಿತ್ರಗಳ ಗುಣಮಟ್ಟ ಸುಧಾರಣೆ’ (AI for Medical Image Enhancement) ವಿಷಯದಲ್ಲಿ ಎಕ್ಸ್-ರೇ, ಎಂಆರ್‌ಐ, ಸಿಟಿ ಸ್ಕ್ಯಾನ್ ಮೊದಲಾದ ವೈದ್ಯಕೀಯ ಚಿತ್ರಗಳನ್ನು ಕೃತಕ ಬುದ್ಧಿಮತ್ತೆಯ ನೆರವಿನಿಂದ ವಿಶ್ಲೇಷಿಸಿ, ಟ್ಯೂಮರ್ ಪತ್ತೆ, ಅಂಗಾಂಗಗಳ ವಿಭಜನೆ, ದೇಹದ ಅಸಹಜತೆಗಳ ಗುರುತಿಸುವಿಕೆ ಹಾಗೂ ವರ್ಗೀಕರಣದ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಉಪಯುಕ್ತವಾಗುವ ನವೀನ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಸವಾಲು ನೀಡಲಾಗುತ್ತದೆ ಎಂದು ತಿಳಿಸಿದರು. ಎರಡನೇ ವಿಭಾಗ ‘ವಸ್ತು ಗುರುತಿಸುವಿಕೆಗಾಗಿ ಕೃತಕ ಬುದ್ಧಿಮತ್ತೆ’ (AI for Object Recognition) ವಿಷಯದಲ್ಲಿ, ನೈಜ ಪರಿಸರದಲ್ಲಿ ವಸ್ತುಗಳನ್ನು ಪತ್ತೆಹಚ್ಚುವ ಹಾಗೂ ವರ್ಗೀಕರಿಸುವ ಬುದ್ಧಿವಂತ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಸವಾಲನ್ನು ಒಳಗೊಂಡಿದೆ. ಸ್ವಯಂಚಾಲಿತ ವಾಹನಗಳು, ಸ್ಮಾರ್ಟ್ ಸರ್ವೇಲೆನ್ಸ್, ಕೈಗಾರಿಕೆಗಳ ಗುಣಮಟ್ಟ ಪರಿಶೀಲನೆ ಸೇರಿದಂತೆ ವಿವಿಧ ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ ಆಧಾರಿತ ಪರಿಹಾರಗಳನ್ನು ರೂಪಿಸಲಿದ್ದಾರೆ ಎಂದರು.ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವ ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳ ರೂಪದಲ್ಲಿ ಒಟ್ಟು ಸುಮಾರು ₹2 ಲಕ್ಷ ನಗದು ಬಹುಮಾನ ವಿತರಿಸಲಾಗುವುದು.
ನಾಳೆ ಉದ್ಘಾಟನೆ: ಜುಲೈ 24ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಖ್ಯಾತ ಉದ್ಯಮಿ ಎಸ್. ರುದ್ರೇಗೌಡ ಉದ್ಘಾಟಿಸಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಹಾಗೂ ಡಾ. ಆರ್.ಜೆ. ರಾಘವೇಂದ್ರ ಉಪಸ್ಥಿತರಿರುವರು.
ಜು.25ರಂದು ಶನಿವಾರ ಸಂಜೆ 4 ಗಂಟೆಗೆ ನಡೆಯುವ ಸಮಾರಂಭದಲ್ಲಿ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕರಾದ ಡಾ. ಅರ್ಚನಾ ಮತೂರ್ ಸಮಾರೋಪ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಘಟನಾ ಸಮಿತಿಯ ಸದಸ್ಯರಾದ ಡಾ.ಆರ್.ಜೆ. ರಾಘವೇಂದ್ರ , ಡಾ.ಎಂ.ಪಿ.ಪವನ್ ಕುಮಾರ್, ಡಾ. ಸಂಜೀವ್ ಕುಂಟೆ, ಪಿ.ಅರುಣ್ ಕುಮಾರ್, ಕೆ.ಎಂ.ಮನೀಷಾ ಹಾಗೂ ಎಸ್.ಎನ್.ವಿಶೃತ ರಾಣಿ ಉಪಸ್ಥಿತರಿದ್ದರು.
---------------
ಪೋಟೋ: 22ಎಸ್‌ಎಂಜಿಕೆಪಿ01
ಶಿವಮೊಗ್ಗದ ಪತ್ರಿಕಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.