ಶ್ರೀರಂಗಪಟ್ಟಣ ದಸರಾಗೆ ಯುವ ಸಂಭ್ರಮ ಹೊಸ ಮೆರುಗು: ಅದಿತಿ ಪ್ರಭುದೇವ

KannadaprabhaNewsNetwork |  
Published : Oct 13, 2026, 01:45 AM IST
12ಕೆಎಂಎನ್ ಡಿ32 | Kannada Prabha

ಸಾರಾಂಶ

ಯುವ ಪ್ರತಿಭೆಗಳಿಗೆ ತಮ್ಮ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಯುವ ಸಂಭ್ರಮ ವೇದಿಕೆಗಳು ಅತ್ಯಂತ ಅಗತ್ಯವಾಗಿವೆ. ಯುವಜನರಲ್ಲಿ ಸೃಜನಶೀಲತೆ ಮತ್ತು ಸಾಂಸ್ಕೃತಿಕ ಆಸಕ್ತಿಯನ್ನು ಉತ್ತೇಜಿಸುವ ಮೂಲಕ ನಮ್ಮ ನಾಡಿನ ಕಲಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಯುವ ಸಂಭ್ರಮ ಸಹಕಾರಿಯಾಗಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಯುವ ಸಂಭ್ರಮ ಯುವಜನರಲ್ಲಿ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಅಭಿಮಾನ ಬೆಳೆಸುವ ಜೊತೆಗೆ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಹೊಸ ಮೆರುಗು ನೀಡಿದೆ ಎಂದು ಚಲನಚಿತ್ರ ನಟಿ ಅದಿತಿ ಪ್ರಭುದೇವ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಯುವ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿ, ಯುವ ಪ್ರತಿಭೆಗಳಿಗೆ ತಮ್ಮ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಇಂತಹ ವೇದಿಕೆಗಳು ಅತ್ಯಂತ ಅಗತ್ಯವಾಗಿವೆ. ಯುವಜನರಲ್ಲಿ ಸೃಜನಶೀಲತೆ ಮತ್ತು ಸಾಂಸ್ಕೃತಿಕ ಆಸಕ್ತಿಯನ್ನು ಉತ್ತೇಜಿಸುವ ಮೂಲಕ ನಮ್ಮ ನಾಡಿನ ಕಲಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಯುವ ಸಂಭ್ರಮ ಸಹಕಾರಿಯಾಗಿದೆ ಎಂದರು.

ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಮಾತನಾಡಿ, ಮೈಸೂರು ದಸರಾ ಮಾದರಿಯಲ್ಲಿ ಶ್ರೀರಂಗಪಟ್ಟಣದಲ್ಲಿಯೂ ಯುವ ಸಂಭ್ರಮ ಆಯೋಜಿಸುವ ಮೂಲಕ ಜಿಲ್ಲೆಯ ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಪ್ರಯತ್ನ ಮಾಡಲಾಗಿದೆ. ಈ ಬಾರಿ ಆರಂಭಿಸಿರುವ ಯುವ ಸಂಭ್ರಮ ಮುಂದಿನ ವರ್ಷಗಳಲ್ಲಿಯೂ ನಿರಂತರವಾಗಿ ಮುಂದುವರಿಯಬೇಕು ಎಂದರು.

ಜಿಲ್ಲೆಯ ಯುವಜನರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹೆಚ್ಚಿನ ಅವಕಾಶಗಳು ದೊರೆಯಬೇಕು. ಶ್ರೀರಂಗಪಟ್ಟಣ ದಸರಾ ಈ ಹಿಂದೆ ಕೆಲವೇ ದಿನಗಳ ಕಾರ್ಯಕ್ರಮಗಳಿಗೆ ಸೀಮಿತವಾಗಿತ್ತು. ಮೈಸೂರು ದಸರಾ ಯುವ ಸಂಭ್ರಮದಲ್ಲಿ ಜಿಲ್ಲೆಯ ಯುವಕರು ಭಾಗವಹಿಸುವಂತೆ ಇಲ್ಲಿಯೂ ಸ್ಥಳೀಯ ಪ್ರತಿಭೆಗಳಿಗೆ ಅಂತಹದ್ದೇ ಅವಕಾಶ ಕಲ್ಪಿಸಬೇಕು ಎಂಬ ಉದ್ದೇಶದಿಂದ ಈ ಹೊಸ ಪ್ರಯತ್ನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ದಸರಾ ಮಹೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಯುವ ಸಂಭ್ರಮ ಆಯೋಜಿಸಿರುವುದು ಅರ್ಥಪೂರ್ಣ ಬೆಳವಣಿಗೆಯಾಗಿದೆ. ಯುವಜನರಲ್ಲಿರುವ ಪ್ರತಿಭೆ ಗುರುತಿಸಿ ಅವರಿಗೆ ಅದನ್ನು ಅನಾವರಣಗೊಳಿಸಲು ಅವಕಾಶ ಕಲ್ಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರ ಪರಿಕಲ್ಪನೆಯಂತೆ ಯುವ ಸಂಭ್ರಮಕ್ಕೆ ಚಾಲನೆ ನೀಡಲಾಗಿದೆ. ಅದನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವಲ್ಲಿ ಸಮಿತಿಯ ಸದಸ್ಯರು ಹಾಗೂ ಅಧಿಕಾರಿಗಳು ಒಗ್ಗಟ್ಟಿನಿಂದ ಶ್ರಮಿಸಿದ್ದಾರೆ ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ದೊರೆಯದಿದ್ದರೆ ಪ್ರತಿಭೆ ಬೆಳಕಿಗೆ ಬಾರದೆ ಉಳಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯುವ ಸಂಭ್ರಮ ವಿದ್ಯಾರ್ಥಿಗಳಿಗೆ ತಮ್ಮ ಕಲಾ ಸಾಮರ್ಥ್ಯ ಪ್ರದರ್ಶಿಸಲು ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಉತ್ತಮ ಅವಕಾಶ ಕಲ್ಪಿಸಿದೆ. ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿರುವುದು ಸಂತಸದ ಸಂಗತಿ ಎಂದರು.

ಇದಕ್ಕೂ ಮುನ್ನ ಚಲನಚಿತ್ರ ನಟಿ ಅದಿತಿ ಪ್ರಭುದೇವ ಯುವ ಸಂಭ್ರಮದ ಲೋಗೋ ಬಿಡುಗಡೆ ಮಾಡಿದರು. ವಿವಿಧ ಜಾನಪದ ಕಲಾತಂಡಗಳಿಂದ ಡೊಳ್ಳು ಕುಣಿತ, ವೀರಗಾಸೆ, ಕಂಸಾಳೆ ಸೇರಿದಂತೆ ಹಲವು ಸಾಂಪ್ರದಾಯಿಕ ಕಲಾ ಪ್ರದರ್ಶನಗಳು ನಡೆದವು. ಕಲಾವಿದರ ಆಕರ್ಷಕ ಪ್ರದರ್ಶನಗಳು ನೆರೆದಿದ್ದವರ ಗಮನ ಸೆಳೆದವು.

ಈ ವೇಳೆ ಜಿಲ್ಲಾ ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಮಂಡ್ಯ ವಿವಿ ಕುಲಪತಿ ಕಲ್ಪಶ್ರೀ, ಜಿಪಂ ಉಪ ಕಾರ್ಯದರ್ಶಿ (ದರ್ಜೆ-೨) ಪಿ.ಲಕ್ಷ್ಮಿ, ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಂ.ಎಲ್.ದಿನೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೇಲುಕೋಟೆ: ಅ.16 ರಿಂದ 19ರವರೆಗೆ ನವರಾತ್ರಿ ಸಂಗೀತ-ನೃತ್ಯೋತ್ಸವ
ಶ್ರೀರಂಗಪಟ್ಟಣ ದಸರಾ: 11 ದಿನಗಳ ವಿಶೇಷ ದೀಪಾಲಂಕಾರಕ್ಕೆ ಚಾಲನೆ