ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಯುವನಿಧಿ ಯೋಜನೆ ಕುರಿತು ಭಿತ್ತಿ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಸೇರಿದಂತೆ ೪ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ೫ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.ರಾಜ್ಯದಲ್ಲಿ ಪದವಿ ಉತ್ತೀರ್ಣರಾದ ಲಕ್ಷಾಂತರ ನಿರುದ್ಯೋಗಿಗಳು ಇರುವುದನ್ನು ಮನಗಂಡ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಚಾಲನೆ ನೀಡಲಾಗಿದೆ.
ಈಗಾಗಲೇ ಜಾರಿಯಲ್ಲಿರುವ ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಿ ಬರಲು ಸಾರಿಗೆ ವ್ಯವಸ್ಥೆಯಲ್ಲಿ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಸಚಿವರ ಗಮನಕ್ಕೆ ಮಾಧ್ಯಮ ಪ್ರತಿನಿಧಿಗಳು ತಂದಾಗ, ಯೋಜನೆ ಜಾರಿಗೊಳಿಸಿದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಅಂದಾಜು ಮಾಡಿರಲಿಲ್ಲ. ಆದ ಕಾರಣ ಸಮಸ್ಯೆಯುಂಟಾಗಿದೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಬಸ್ ಸೇರಿದಂತೆ ಹೊಸದಾಗಿ ಸುಮಾರು 5 ಸಾವಿರ ಬಸ್‌ಗಳನ್ನು ಖರೀದಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಆದ್ಯತೆ ಮೇಲೆ ಹೆಚ್ಚುವರಿ ಬಸ್‌ಗಳನ್ನು ಸಂಚಾರಕ್ಕೆ ಬಿಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಸ್ಪಂದಿಸಿದ ಸಚಿವರು, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಎಲ್ಲಾ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬರುವ 2024ರ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಆಯ-ವ್ಯಯ ಮಂಡನೆಯಾಗುವ ನಿರೀಕ್ಷೆಯಿದ್ದು, ಆಯ-ವ್ಯಯದ ನಂತರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತುಮಕೂರು ತಾಲೂಕು ದುರ್ಗದಹಳ್ಳಿಯಲ್ಲಿ ಸ್ಮಶಾನವಿಲ್ಲದೆ ರಸ್ತೆ ಪಕ್ಕದಲ್ಲಿ ಶವ ಸಂಸ್ಕಾರ ಮಾಡಿರುವ ಬಗ್ಗೆ ಮಾತನಾಡಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದು, ಪ್ರಕರಣವನ್ನು ಬಗೆಹರಿಸದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕ್ರಮವಹಿಸಲಾಗುವುದು. ದಲಿತ ಸಮುದಾಯಗಳಿಗೆ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ತೊಂದರೆ ಅನುಭವಿಸುತ್ತಿರುವುದನ್ನು ತಡೆಯಲು 2013ರಲ್ಲಿಯೇ ನಮ್ಮ ಸರ್ಕಾರ ರಾಜ್ಯದ ಪ್ರತಿ ಗ್ರಾಮದಲ್ಲಿಯೂ ಸಾರ್ವಜನಿಕ ಸ್ಮಶಾನಕ್ಕಾಗಿ ಭೂಮಿ ಮೀಸಲಿಡಬೇಕೆಂಬ ನಿಯಮ ಜಾರಿಗೆ ತಂದಿತ್ತು. ಈಗಲೂ ಈ ನಿಯಮ ಮುಂದುವರೆದುಕೊಂಡು ಹೋಗುತ್ತಿದ್ದು, ಪ್ರತಿ ಗ್ರಾಮದಲ್ಲಿಯೂ ಸ್ಮಶಾನ ಭೂಮಿ ಮೀಸಲಿಡುವ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಅಗತ್ಯವಿರುವೆಡೆ ವಿದ್ಯುತ್ ಚಿತಾಗಾರ ನಿರ್ಮಿಸುವ ಬಗ್ಗೆಯೂ ಚಿಂತಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆಂಪಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.ಯುವನಿಧಿ ಯೋಜನೆಗೆ ನೋಂದಣಿ ಕಡ್ಡಾಯ: ಯುವನಿಧಿ ಯೋಜನೆಯಡಿ ಪದವಿ ಮುಗಿಸಿದ ಅರ್ಹ ಫಲಾನುಭವಿಗಳಿಗೆ ಮಾಹೆಯಾನ 3 ಸಾವಿರ ರು. ಹಾಗೂ ಡಿಪ್ಲೋಮಾ ಹೊಂದಿದವರಿಗೆ 1,500 ರೂ. ಗಳನ್ನು ಅವರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆಯನ್ನು ಜಮೆ ಮಾಡಲಾಗುವುದು. 2023 ರಲ್ಲಿ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಅಂಕಿ-ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಪದವೀಧರರು ಹಾಗೂ 2 ಸಾವಿರ ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿದ್ದಾರೆಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಯುವನಿಧಿ ಯೋಜನೆ ಕುರಿತು ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಿದ ಡಾ. ಜಿ. ಪರಮೇಶ್ವರ್.