ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಮರಳಗಾಲದ ಬಳಿ ನಡೆಯುತ್ತಿರುವ 51 ಜನ ವಸತಿಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿ, ಶುದ್ಧೀಕರಣ ಘಟಕ ಸೇರಿದಂತೆ ವಿವಿಧ ಘಟಕಗಳ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿದರು. ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಸಹಾಯಕ ಕಾರ್ಯಪಾಲಕ ಅಭಿಯಂತರರಿಂದ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದರು.
ತಾಲೂಕಿನ ಯೋಜನೆಯ ಪ್ರಮುಖ ಘಟಕವಾದ ಜಾಕ್‌ವೆಲ್ ನಿರ್ಮಾಣ ಕಾಮಗಾರಿ ಇನ್ನೂ ಪ್ರಾರಂಭವಾಗದಿರುವುದನ್ನು ಗಮನಿಸಿದ ಸಿಇಒ, ಈ ಕುರಿತು ನಿರಂತರವಾಗಿ ಅನುಸರಣೆ ನಡೆಸಿ ಅಗತ್ಯ ತಾಂತ್ರಿಕ ಪ್ರಕ್ರಿಯೆ ಪೂರ್ಣಗೊಳಿಸಿ ಪರಿಷ್ಕೃತ ಯೋಜನಾ ವರದಿಗೆ ಅನುಮೋದನೆ ಪಡೆಯಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಮಂಡ್ಯ ಮತ್ತು ಮದ್ದೂರು ತಾಲೂಕುಗಳ ಗ್ರಾಮೀಣ ಜನವಸತಿಗಳಿಗೆ ಕುಡಿಯುವ ನೀರು ಪೂರೈಸಲು ಕೈಗೆತ್ತಿಕೊಳ್ಳಲಾಗಿರುವ ಎರಡು ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಕಾಮಗಾರಿಗಳು ನಿರೀಕ್ಷಿತ ಪ್ರಗತಿ ಸಾಧಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ಶ್ರೀರಂಗಪಟ್ಟಣ, ಮಂಡ್ಯ ಮತ್ತು ಮದ್ದೂರು ತಾಲೂಕುಗಳ ಮೂರು ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಗುತ್ತಿಗೆದಾರರು ಅಗತ್ಯ ಪ್ರಮಾಣದಲ್ಲಿ ಮಾನವ ಸಂಪನ್ಮೂಲ ಮತ್ತು ಯಂತ್ರೋಪಕರಣಗಳನ್ನು ಹೆಚ್ಚಳ ಮಾಡಿ ಕಾಮಗಾರಿಗಳಿಗೆ ವೇಗ ನೀಡಬೇಕು. ಸಂಬಂಧಪಟ್ಟ ಅಭಿಯಂತರರು ಪ್ರತಿದಿನ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ ಅದರ ಮಾಹಿತಿಯನ್ನು ವಾಟ್ಸಾಪ್ ಮೂಲಕ ಸಲ್ಲಿಸಬೇಕು ಎಂದು ಸೂಚಿಸಿದರು.