;Resize=(412,232))
ಬೆಂಗಳೂರು : ಮುಂದಿನ ದಿನಗಳಲ್ಲಿ ಆನೇಕಲ್ ಭಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಗುರುವಾರ ಆನೇಕಲ್‌ನ ಮುತ್ತನಲ್ಲೂರಿಗೆ ಭೇಟಿ ನೀಡಿ ಮಾತನಾಡಿದ ಅವರು, ಈಗಾಗಲೇ ಆನೇಕಲ್‌ಗೆ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಈಗಿನಿಂದಲೇ ಸಂಚಾರ ದಟ್ಟಣೆ ನಿಯಂತ್ರಣ ಯೋಜನೆ ರೂಪಿಸಬೇಕು. ಏಕೆಂದರೆ ನಗರ ಬೆಳವಣಿಗೆ ಆದ ನಂತರ ಯೋಜನೆ ರೂಪಿಸಲು ಕಷ್ಟವಾಗಲಿದೆ. ಅದಕ್ಕೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಬಯೋಕಾನ್ ಸಂಸ್ಥೆಯು ಪಂಚಾಯತಿ ವ್ಯಾಪ್ತಿಯಲ್ಲಿ ಇದೆ. ಬೆಂಗಳೂರು ನಗರ ವ್ಯಾಪ್ತಿ ಹಾಗೂ ಪಂಚಾಯತಿ ವ್ಯಾಪ್ತಿ ಬೇರೆ, ಬೇರೆ. ಈ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ ಎಂದು ಹೇಳಿದರು
30ಕ್ಕೆ ನಗರದಲ್ಲಿ ನಗರಾಭಿವೃದ್ಧಿ ಸಚಿವರ ಸಮ್ಮೇಳನ:ಡಿಸಿಎಂ
ಬೆಂಗಳೂರು : ದಕ್ಷಿಣ ಭಾರತದ ರಾಜ್ಯಗಳ ನಗರಾಭಿವೃದ್ಧಿ ಸಚಿವರ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಅ.30ಕ್ಕೆ ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಸಮ್ಮತಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದ ನಗರಾಭಿವೃದ್ಧಿ ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ಈಗಾಗಲೇ ಹಲವು ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ಅನುದಾನ ಕೇಳಿದ್ದೇವೆ. ಈಗಲೂ ಕೇಳುತ್ತೇವೆ ಎಂದು ತಿಳಿಸಿದ್ದಾರೆ.
ಜಿಬಿಎ ವ್ಯಾಪ್ತಿಗೆ ಸೇರಲು ಅರ್ಹತೆ ಇರುವ ಬೆಂಗಳೂರು ನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದೇನೆ. ಕೆಲ ನಗರ ಸಭೆಗಳು, ಪಟ್ಟಣ ಪಂಚಾಯತಿ ಸೇರಿ ಅನೇಕ ಸ್ಥಳೀಯ ಸಂಸ್ಥೆಗಳ ಗಡಿಪ್ರದೇಶಗಳು ಜಿಬಿಎ ವ್ಯಾಪ್ತಿಗೆ ಸೇರಿದ್ದು, ಶುಕ್ರವಾರ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದಿದ್ದೇನೆ. ಈ ಪ್ರದೇಶದ ಕೆಲ ಭಾಗಗಳನ್ನು ಮುಂದಿನ ದಿನಗಳಲ್ಲಿ ಜಿಬಿಎ ಅಡಿ ಬರುವ ಬೆಂಗಳೂರು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಲಾಗುವುದು. ಬಿ.ಎಸ್. ಪಾಟೀಲ್ ಸಮಿತಿ ಮೂಲಕ ಜಿಬಿಎ ವ್ಯಾಪ್ತಿಗೆ ಸೇರಿಸಬಹುದಾದ ಪ್ರದೇಶಗಳ ಬಗ್ಗೆ ವರದಿ ತಯಾರಾಗುತ್ತಿದೆ. ಈ ವಿಚಾರವಾಗಿ ಶಾಸಕರು, ಸಂಸದರು, ಸಾರ್ವಜನಿಕರು ಸಂಘ ಸಂಸ್ಥೆಗಳ ಜತೆ ಚರ್ಚಿಸಲು ಸೂಚಿಸಿದ್ದೇವೆ ಎಂದರು.
ಎಲೆಕ್ಟ್ರಾನಿಕ್ ಸಿಟಿ ಪ್ರದೇಶದ ವಿವಿಧ ಬಡಾವಣೆಗಳಿಗೆ ಉಪಮುಖ್ಯಮಂತ್ರಿ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಎಲೆಕ್ಟ್ರಾನಿಕ್ ಸಿಟಿ, ವೈಟ್ ಫೀಲ್ಡ್, ಏರ್ ಪೋರ್ಟ್ ರಸ್ತೆ, ಯಲಹಂಕದ ಕೆಲ ಪ್ರದೇಶ ಇನ್ನೂ ಪಂಚಾಯತಿಯಾಗಿಯೇ ಉಳಿದುಕೊಂಡಿವೆ. ಎಲ್ಲೆಲ್ಲಿ ನಗರೀಕರಣ ಹೆಚ್ಚಾಗಿದೆ, ಆ ಪ್ರದೇಶಗಳಲ್ಲಿ ಅಚ್ಚುಕಟ್ಟಾಗಿ ಯೋಜನೆ ರೂಪಿಸಬೇಕಿದೆ. ಕೆಲ ಪ್ರದೇಶಗಳಲ್ಲಿ ಕಸ ಎತ್ತುತ್ತಾರೆ, ಮತ್ತೆ ಕೆಲ ಪ್ರದೇಶಗಳಲ್ಲಿ ಕಸ ಎತ್ತದೇ ಅವು ಪಂಚಾಯಿತಿ ವ್ಯಾಪ್ತಿ ಎಂದು ಕಾರಣ ಹೇಳುತ್ತಾರೆ. ಹೀಗಾಗಿ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿ ಪಡಿಸಬೇಕಾಗಿದೆ. ನಕ್ಷೆಯಲ್ಲಿ ಆ ಪ್ರದೇಶಗಳನ್ನು ನೋಡುವುದಕ್ಕಿಂತ ಅಲ್ಲಿಗೆ ಹೋಗಿ ಕಣ್ಣಾರೆ ನೋಡಬೇಕು ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.
ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯೆ ಇಲ್ಲ: ಡಿಸಿಎಂ
ಇತರೆ ಶಾಸಕರಂತೆ ಯತೀಂದ್ರ ವಿರುದ್ಧ ಶಿಸ್ತು ಕ್ರಮವಿಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.
ಇನ್ನು ಆಳಂದ ಕ್ಷೇತ್ರದಲ್ಲಿ 6 ಸಾವಿರ ಮತಗಳನ್ನು ತಿರುಚಿರುವ ಬಗ್ಗೆ ಯಾವುದೇ ಅನುಮಾನವಿಲ್ಲ. ಮೊಬೈಲ್ ಸಂಖ್ಯೆಗಳ ಮೂಲಕ ಈ ಕೆಲಸ ಮಾಡಿದ್ದಾರೆ. ಈ ಬಗ್ಗೆ ಆ ಸಮಯದಲ್ಲೇ ಅಧಿಕಾರಿಗಳು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.