ಬೆಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಸೋಮವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಜಯನಗರ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಅಬ್ಬರದ ರೋಡ್ ಶೋ ನಡೆಸಿ ಮತ ಯಾಚಿಸಿದರು.
ರೋಡ್ ಶೋ ಮಾರ್ಗದುದ್ದಕ್ಕೂ ಅಪಾರ ಸಂಖ್ಯೆಯ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಇಬ್ಬರೂ ಯುವ ನಾಯಕರ ಪರ ಘೋಷಣೆ ಕೂಗಿ ಭರ್ಜರಿ ಸ್ವಾಗತ ಕೋರಿದರು.
ಕಾಂಗ್ರೆಸ್-ಡಿಎಂಕೆ ಒಂದೇ ನಾಣ್ಯ ಎರಡು ಮುಖ:
ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅಣ್ಣಾಮಲೈ, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ, ತಮಿಳುನಾಡಿನ ಡಿ.ಎಂ.ಕೆ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳು. ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುವುದು, ಕಾನೂನು ಸುವ್ಯವಸ್ಥೆ ಗಾಳಿಗೆ ತೂರುವುದು, ಸಮಾಜಘಾತುಕ ಶಕ್ತಿಗಳನ್ನು ಪೋಷಿಸುವುದು ಈ ಪಕ್ಷಗಳ ಕಾರ್ಯಸೂಚಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ತಮಿಳುನಾಡಿನಲ್ಲಿ ಈ ಬಾರಿ ಹೊಸ ಅಲೆ ಸೃಷ್ಟಿಯಾಗಿದ್ದು, ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ತೇಜಸ್ವಿ ಸೂರ್ಯ ಅವರು ಚಿಕ್ಕ ವಯಸ್ಸಿನಲ್ಲೇ ಸಂಸದರಾಗಿ ಕ್ಷೇತ್ರದಲ್ಲಿ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಯುವಶಕ್ತಿಗೆ ಸ್ಫೂರ್ತಿ ತುಂಬುತ್ತಿದ್ದಾರೆ ಎಂದು ಶ್ಲಾಘಿಸಿದರು.
ಮೋದಿಯಿಂದ ಯುವಶಕ್ತಿಗೆ ಚೈತನ್ಯ:
ಅಭ್ಯರ್ಥಿ ತೇಜಸ್ವಿ ಸೂರ್ಯ ಮಾತನಾಡಿ, ನವ ಭಾರತದ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹುದೊಡ್ಡದಿದೆ. ಪ್ರಧಾನಿ ನರೇಂದ್ರ ಮೊದಿ ಅವರು ಯುವ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ರಕ್ಷಣಾ ಪಡೆಗಳಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಎರಡು ಪಟ್ಟು ಹೆಚ್ಚಿದೆ. ಸರ್ಕಾರದ ಪ್ರೋತ್ಸಾಹದಿಂದ ಯುವಜನರಲ್ಲಿ ಕ್ರೀಡಾಸಕ್ತಿ ಹೆಚ್ಚುತ್ತಿದ್ದು, ವಿವಿಧ ವಲಯಗಳಲ್ಲಿ ತಮ್ಮ ಪ್ರತಿಭೆ, ಸಾಮರ್ಥ್ಯ ತೋರಲು ಸಾಧ್ಯವಾಗಿದೆ ಎಂದು ಹೇಳಿದರು.
ಶಾಸಕರಾದ ಸಿ.ಕೆ.ರಾಮಮೂರ್ತಿ, ಉದಯ್ ಗರುಡಾಚಾರ್ ಸೇರಿದಂತೆ ಅಪಾರ ಸಂಖ್ಯೆಯ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.