ಬೆಂಗಳೂರು : ಬಾಕಿ ಉಳಿದ ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆದಷ್ಟು ಬೇಗ ಮುಗಿಸಿ ಎಂದು ಪಕ್ಷದ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ.
ಗುರುವಾರ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಇನ್ನೂ ಹಲವು ಜಿಲ್ಲೆಗಳ ಅಧ್ಯಕ್ಷರ ನೇಮಕ ಬಾಕಿ ಉಳಿದಿರುವ ಬಗ್ಗೆ ಚರ್ಚೆಯಾಯಿತು. ಹಲವು ನಾಯಕರು ಕಾರಣಾಂತರದಿಂದ ವಿಳಂಬವಾಗಿರುವ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದರು.
ಈ ವೇಳೆ ಮಾತನಾಡಿದ ರಾಧಾಮೋಹನ್ ದಾಸ್ ಅಗರ್ವಾಲ್, ಪಕ್ಷದ ಸಂಘಟನೆ ದೃಷ್ಟಿಯಿಂದ ಜಿಲ್ಲಾಧ್ಯಕ್ಷರ ನೇಮಕ ಮುಖ್ಯವಾದದ್ದು. ಇನ್ನು ತಡ ಮಾಡದೆ ನೇಮಕ ಪ್ರಕ್ರಿಯೆ ಕೈಗೊಳ್ಳಬೇಕು. ನಂತರ ಇನ್ನುಳಿದ ಪದಾಧಿಕಾರಿಗಳ ನೇಮಕ ಪ್ರಕ್ರಿಯೆಯನ್ನೂ ಮಾಡಿ ಮುಗಿಸಿ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಇತರ ನಾಯಕರಿಗೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.