ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿರುವುದು ಮತ್ತು ಅವರಿಗೆ ಜನರ ತೆರಿಗೆ ಹಣ ನೀಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ರಾಜ್ಯಪಾಲರಿಗೆ ದೂರು ನೀಡಿದೆ.
ಬೆಂಗಳೂರು : ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿರುವುದು ಮತ್ತು ಅವರಿಗೆ ಜನರ ತೆರಿಗೆ ಹಣ ನೀಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ರಾಜ್ಯಪಾಲರಿಗೆ ದೂರು ನೀಡಿದೆ.
ಬುಧವಾರ ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಮಿತ್ರ ಪಕ್ಷದ ಸದಸ್ಯರು ಧರಣಿ ನಡೆಸಿ, ಸದನಕ್ಕೆ ಹಾಜರಾದ ಬಳಿಕ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್‌ನ ಉಭಯ ಪಕ್ಷಗಳ ಶಾಸಕರು ರಾಜಭವನಕ್ಕೆ ತೆರಳಿ ದೂರು ನೀಡಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ತಕ್ಷಣ ವಿಸರ್ಜಿಸಬೇಕು ಮತ್ತು ಸಾರ್ವಜನಿಕ ನಿಧಿ ದುರುಪಯೋಗ ತಡೆಯಲು ಸಮಿತಿಗಳು ರಾಜಕೀಯ ಪ್ರೇರಿತ ಎಂದು ಪ್ರಕಟಿಸಬೇಕು. ಸಾರ್ವಜನಿಕ ಸಂಪನ್ಮೂಲಗಳ ಸರಿಯಾದ ಬಳಕೆ ಖಚಿತಪಡಿಸಿಕೊಳ್ಳಬೇಕು. ಸಮಿತಿಗಳಿಗೆ ಹಂಚಿಕೆಯಾದ ಹಣ ಅಗತ್ಯ ಸಾರ್ವಜನಿಕ ಸೇವೆಗಳು ಮತ್ತು ಕಲ್ಯಾಣ ಯೋಜನೆಗಳಿಗೆ ಹಂಚಿಕೆ ಮಾಡಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಬೇಕು. ಅಲ್ಲದೆ, ಸ್ಥಳೀಯ ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಚುನಾಯಿತ ಪ್ರತಿನಿಧಿಗಳನ್ನು ನೇಮಿಸಬೇಕು ಮತ್ತು ರಾಜಕೀಯ ನೇಮಕಾತಿಗಳನ್ನು ತಡೆಯಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ. ರಾಜ್ಯದ ಆಡಳಿತ ಮತ್ತು ಆರ್ಥಿಕತೆ ಹಿತದೃಷ್ಟಿಯಿಂದ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಈ ಅಸಾಂವಿಧಾನಿಕ ಸಮಿತಿಗಳನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.
ಕೆಂಗಲ್ ಪ್ರತಿಮೆ ಬಳಿ ಧರಣಿ: ರಾಜ್ಯಪಾಲರಿಗೆ ದೂರು ನೀಡುವ ಮುನ್ನ ಮಿತ್ರಪಕ್ಷಗಳ ಮುಖಂಡರು, ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು. ‘ಸಂವಿಧಾನ ಉಳಿಸಿ, ಸರ್ಕಾರದ ಹಣ ರಕ್ಷಿಸಿ’ ಎಂದು ಆಗ್ರಹಿಸಿ ಧರಣಿ ನಡೆಸಲಾಯಿತು. ರಾಜ್ಯ ಕಾಂಗ್ರೆಸ್ ಸರ್ಕಾರ ತೆರಿಗೆ ಹಣ ದುರುಪಯೋಗ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಸುದ್ದಿಗಾರರ ಜತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಸಮಿತಿಗೆ ವೇತನವಾಗಿ ನೀಡುತ್ತಿರುವುದು ನಾಚಿಗೆಗೇಡಿನ ಸಂಗತಿ. ವಿಧಾನಸಭಾ ಕ್ಷೇತ್ರ, ಜಿಲ್ಲೆ, ರಾಜ್ಯಕ್ಕೆ ಒಬ್ಬರಂತೆ ನೇಮಿಸಲಾಗಿದೆ. ರಾಜ್ಯಾಧ್ಯಕ್ಷರಿಗೆ ಲಕ್ಷಾಂತರ ರು. ವೇತನ, ಕ್ಯಾಬಿನೆಟ್ ದರ್ಜೆ ನೀಡಿದ್ದು ಖಂಡನೀಯ ಎಂದು ಟೀಕಾಪ್ರಹಾರ ನಡೆಸಿದರು. ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರ ಗೌರವಧನ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಬಿಸಿಯೂಟ ಅಡುಗೆ ಮಾಡುವವರು, ದಾದಿಯರು, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುತ್ತಿಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತವರ ಮಕ್ಕಳನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದನ್ನು ಹೈಕೋರ್ಟಿನಲ್ಲೂ ಪ್ರಶ್ನಿಸಿದ್ದೇವೆ. ಗ್ಯಾರಂಟಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ, ತಹಸೀಲ್ದಾರ್ ಇಲ್ಲವೇ? ಕಾರ್ಯಕರ್ತರನ್ನು ಬಳಸಿಕೊಳ್ಳಬೇಕೇ? ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸವಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅಸಾಂವಿಧಾನಿಕ ನಡೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತರಲಾಗಿದೆ. ರಾಜ್ಯದ ಜನರ ತೆರಿಗೆ ಹಣದ ದುರುಪಯೋಗವಾಗಿದೆ ಎಂಬುದನ್ನು ಮನದಟ್ಟು ಮಾಡಲಾಗಿದೆ. ಸರ್ಕಾರಕ್ಕೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡುವಂತೆ ಮತ್ತು ಮಧ್ಯಸ್ಥಿಕೆ ವಹಿಸಲು ಮನವಿ ಮಾಡಲಾಗಿದೆ ಎಂದರು. ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಸರ್ಕಾರದ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಸರ್ಕಾರದ ಹಣ ಖರ್ಚು ಮಾಡುವ ಬದಲಾಗಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಯ ಮುಂದೆ ಭಿಕ್ಷೆ ಬೇಡಲಿ ಎಂದು ವಾಗ್ದಾಳಿ ನಡೆಸಿದರು.