ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಗಾಳ: ಡಿಕೆಶಿ ಬಾಂಬ್‌

KannadaprabhaNewsNetwork | Published : Oct 13, 2023 12:15 AM

ಸಾರಾಂಶ

ಕೇಂದ್ರದಿಂದ ಬಿಜೆಪಿಯ ತಂಡವೊಂದು ಸಿನಿಮೀಯ ರೀತಿಯಲ್ಲಿ ಬಂದು ಕಾಂಗ್ರೆಸ್‌ನ ಕೆಲ ನಾಯಕರು ಮತ್ತು ಶಾಸಕರನ್ನು ಭೇಟಿ ಮಾಡಿ ಹೋಗುತ್ತಿದೆ. ಎಲ್ಲೆಲ್ಲಿ ಯಾರ್‍ಯಾರನ್ನು ಭೇಟಿ ಮಾಡುತ್ತಿದ್ದಾರೆ ಎಂಬುದರ ಇಂಚಿಂಚೂ ಮಾಹಿತಿ ಗೊತ್ತಿದೆ.... ಹೀಗೆಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳುವ ಮೂಲಕ ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು ‘ಕೇಂದ್ರದಿಂದ ಬಿಜೆಪಿಯ ತಂಡವೊಂದು ಸಿನಿಮೀಯ ರೀತಿಯಲ್ಲಿ ಬಂದು ಕಾಂಗ್ರೆಸ್‌ನ ಕೆಲ ನಾಯಕರು ಮತ್ತು ಶಾಸಕರನ್ನು ಭೇಟಿ ಮಾಡಿ ಹೋಗುತ್ತಿದೆ. ಎಲ್ಲೆಲ್ಲಿ ಯಾರ್‍ಯಾರನ್ನು ಭೇಟಿ ಮಾಡುತ್ತಿದ್ದಾರೆ ಎಂಬುದರ ಇಂಚಿಂಚೂ ಮಾಹಿತಿ ಗೊತ್ತಿದೆ.’ ಹೀಗೆಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳುವ ಮೂಲಕ ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೆಲವರು ಮುಂದಿನ ವರ್ಷವೇ ವಿಧಾನಸಭೆ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಅದಕ್ಕೆ ವಿವರಣೆ ಕೊಡಲು ಹೋಗುವುದಿಲ್ಲ. ಯಾರು ಯಾರನ್ನು ಭೇಟಿ ಮಾಡುತ್ತಿದ್ದಾರೆ, ಏನೇನು ಆಗುತ್ತಿದೆ ಎಂಬುದರ ಬಗ್ಗೆ ನಮ್ಮ ಪಕ್ಷದ ಮುಖಂಡರು, ಶಾಸಕರು ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ಗುರುವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಮಾಜಿ ಶಾಸಕ ಶಿರಹಟ್ಟಿಯ ರಾಮಪ್ಪ ಲಮಾಣಿ ಮತ್ತು ಅವರ ಬೆಂಬಲಿಗರ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಅವರು ತಂದು ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿವೆ. ಈ ಬಗ್ಗೆ ಮಾಧ್ಯಮದವರು ಎಷ್ಟೇ ಚರ್ಚೆಗೆ ಎಳೆದರೂ ನಾನು ಏನನ್ನೂ ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದರು. ಸ್ಥಳೀಯ ಕಾಂಗ್ರೆಸ್‌ ನಾಯಕರ ಜತೆ ಚರ್ಚೆ ಮಾಡಿ, ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರುಗಳನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ. ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ ನೂರಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನನ್ನನ್ನು ಭೇಟಿ ಮಾಡಿ, ನಾವು ಇಂಡಿಯಾದಲ್ಲಿ ಗುರುತಿಸಿಕೊಂಡಿದ್ದು, ನಿಮ್ಮ ಜೊತೆ ಕೈಜೋಡಿಸುತ್ತೇವೆ ಎಂದು ಹೇಳಿದ್ದಾರೆ. ಬೀದರ್‌ನಿಂದ ಚಾಮರಾಜನಗರದ ತನಕ ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ.ಎನ್.ಚಂದ್ರಪ್ಪ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Share this article