ವಾಲ್ಮೀಕಿ ಹಗರಣ ವಿರೋಧಿಸಿ ಬಿಜೆಪಿ ಶಾಸಕರ ನಡಿಗೆ

KannadaprabhaNewsNetwork |  
Published : Jul 16, 2024, 12:40 AM ISTUpdated : Jul 16, 2024, 04:49 AM IST
BJP Protest 3 | Kannada Prabha

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ  ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಮತ್ತು ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಶಾಸಕರ ಭವನ ಮುಂದೆ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ ಪಾದಯಾತ್ರೆ ನಡೆಸಿದರು.

 ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಮತ್ತು ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಶಾಸಕರ ಭವನ ಮುಂದೆ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ, ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿದರು.

ಸೋಮವಾರ ಶಾಸಕರ ಭವನ ಮುಂಭಾಗದಲ್ಲಿನ ವಾಲ್ಮೀಕಿ ಪ್ರತಿಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಮಾಲಾರ್ಪಣೆ ಮಾಡಿದರು. ಈ ವೇಳೆ ಸರ್ಕಾರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಬಳಿಕ ಶಾಸಕರ ಭವನದಿಂದ ವಿಧಾನಸೌಧದವರೆಗೆ ಕಾಲ್ನಡಿಗೆಯಲ್ಲಿ ಹೋದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದಲ್ಲಿ ಬಹುಕೋಟಿ ಅವ್ಯವಹಾರ ನಡೆದಿದೆ. ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ಬಂಧನಕ್ಕೊಳಗಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆ ಕಳೆದುಕೊಂಡಿದ್ದು, ಸದನದಲ್ಲಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು, ಮುಡಾ ಹಗರಣದ ತನಿಖೆಯನ್ನು ಸರ್ಕಾರವು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸಲು ಮುಂದಾಗಿದೆ. ಮುಖ್ಯಮಂತ್ರಿಗಳಿಗೆ ನಿಜವಾಗಿ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ನ್ಯಾಯಾಂಗ ತನಿಖೆ ಎಂದು ನಾಟಕವಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಕುಟುಂಬವೇ ಪಾಲುದಾರರಿದ್ದಾರೆ. ಸಿದ್ದರಾಮಯ್ಯನವರು ದಲಿತರ ಹೆಸರು ಹೇಳಿಕೊಂಡು, ಎಸ್‌ಸಿ/ಎಸ್‌ಟಿ ವರ್ಗಕ್ಕೆ ನ್ಯಾಯ ಕೊಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದವರು. ಆದರೆ, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಲ್ಲದೆ, ಅದೇ ಮೊತ್ತದಲ್ಲಿ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರದ ಬಂಡವಾಳ ಈ ಮೂಲಕ ಬಯಲಾಗಿದೆ ಎಂದು ಟೀಕಾಪ್ರಹಾರ ನಡೆಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ನಿಗಮದ ಅಧಿಕಾರಿಯೂ ದಲಿತ ಆಗಿದ್ದಾರೆ. ಕಾಂಗ್ರೆಸ್ಸಿಗರಿಗೆ ದಲಿತರ ವೋಟ್ ಬೇಕು ಮತ್ತು ನೋಟು ಕೂಡ ಬೇಕು. ಅಲ್ಲದೇ, ದಲಿತರ ಸಾವು ಬೇಕು. ಇದು ಕಾಂಗ್ರೆಸ್ ನೀತಿ. ಸರ್ಕಾರವು ನೈತಿಕವಾಗಿ ಸತ್ತು ಹೋಗಿದ್ದು, ಅಧಿಕಾರದಲ್ಲಿ ಉಳಿಯುವ ಯೋಗ್ಯತೆ ಕಳಕೊಂಡಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಸುನೀಲ್ ಕುಮಾರ್, ಆರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್, ವಿಶ್ವನಾಥ್ ಸೇರಿದಂತೆ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಿದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ