ಸಾವಿರ ಡಿಕೆಶಿ ಬಂದರೂ ತಿದ್ದುಪಡಿಗೆ ಬಿಡೋಲ್ಲ
=
ಕನ್ನಡಪ್ರಭವಾರ್ತೆ ಬೆಂಗಳೂರುಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದಾರೆ ಎನ್ನಲಾದ ಹೇಳಿಕೆ, ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ, 18 ಬಿಜೆಪಿ ಶಾಸಕರು ಆರು ತಿಂಗಳು ಕಾಲ ಸದನದಿಂದ ಅಮಾನತು ಖಂಡಿಸಿ ಮಂಗಳವಾರವೂ ಕೂಡ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನ ಅವರಣದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸಾವಿರಾರು ಡಿಕೆಶಿ ಬಂದರೂ ಸಂವಿಧಾನ ತಿದ್ದಲು ನಾವು ಬಿಡುವುದಿಲ್ಲ ಎಂದು ಗುಡುಗಿದರು. ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ನಾವೇ ಸಂವಿಧಾನ ತಜ್ಞರು ಎಂದು ಹೇಳುತ್ತಿದ್ದ ಕಾಂಗ್ರೆಸ್‌ನ ನೈಜಮುಖ ಈಗ ಬಯಲಾಗಿದೆ ಎಂದು ವ್ಯಂಗ್ಯವಾಡಿದರು. ಬೆಳ್ತಂಗಡಿ ಶಾಸಕ ಹರೀಶ ಪೂಂಜಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶಿವಕುಮಾರ್ ಹೇಳಿಕೆ ಖಂಡಿಸಬೇಕು ಎಂದು ಒತ್ತಾಯಿಸಿದರು.
ಹಾವೇರಿಯಲ್ಲಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು. ಗದಗ ಮಹತ್ಮಾ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಡಾ. ಚಂದ್ರು ಲಮಾಣಿ, ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಪಾಲ್ಗೊಂಡಿದ್ದರು.
ಕಲಬುರಗಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸಲ್ಮಾನರಿಗೆ ಸರ್ಕಾರಿ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ನೀಡಿದ್ದು ಇದು ಸಂವಿಧಾನ ಬಾಹಿರ. ಇದರಿಂದಾಗಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
==
ಚಿಕ್ಕಮಗಳೂರಲ್ಲಿ ನಡೆದ ಪ್ರತಿಭಟನೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕೃತಿ ದಹಿಸಲು ಯತ್ನಿಸಿದಾಗ ಪೊಲೀಸರು ತಡೆದರು. ನಂತರ ಪ್ರತಿಭಟನಾಕಾರರು ಅನ್ನಭಾಗ್ಯ ಪ್ಲೆಕ್ಸ್‌ನಲ್ಲಿರುವ ಡಿಕೆಶಿ ಅವರ ಭಾವಚಿತ್ರಕ್ಕೆ ಮೊಟ್ಟೆ ಬೀಸಿದರು, ಕೆಲವರು ಕಲ್ಲು ತೂರಾಟ ಮಾಡಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ತೀವ್ರ ವಾಗ್ವಾದವೂ ನಡೆಯಿತು.