ಮುಡಾ ಕೇಸ್‌: ಮೈಸೂರಿನಲ್ಲಿ ಇಂದು ಬಿಜೆಪಿ ಬೃಹತ್‌ ರ್‍ಯಾಲಿ

KannadaprabhaNewsNetwork |  
Published : Jul 12, 2024, 01:40 AM ISTUpdated : Jul 12, 2024, 04:59 AM IST
BY vijayendraa

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಹಾಗೂ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಶುಕ್ರವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

 ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಹಾಗೂ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಶುಕ್ರವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಸೇರಿದಂತೆ ಅನೇಕ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಸುಮಾರು 10 ಸಾವಿರ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಅಲ್ಲದೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆಯೂ ಇದೆ ಎನ್ನಲಾಗಿದೆ.ಪ್ರತಿಭಟನೆ ಸಂಬಂಧ ಶುಕ್ರವಾರ ಬೆಳಗ್ಗೆ ವಿಜಯೇಂದ್ರ, ಅಶೋಕ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನಿಂದ ಒಟ್ಟಿಗೆ ತೆರಳಲಿದ್ದಾರೆ. ಬೆಳಗ್ಗೆ 9ಗಂಟೆಗೆ ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿಯಿರುವ ನೈಸ್ ಜಂಕ್ಷನ್‌ನಲ್ಲಿ ಸೇರಿ ಅಲ್ಲಿಂದ ಎಲ್ಲರೂ ಏಕಕಾಲದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಾಸಕ ಟಿ.ಎಸ್‌‍. ಶ್ರೀವತ್ಸ, ಬೆಳಗ್ಗೆ 10.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದ ಸುಮಾರು 10 ಸಾವಿರ ಮಂದಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

ಪ್ರತಿಭಟನಾ ಸಭೆ ನಂತರ ಪಾದಯಾತ್ರೆ ಮೂಲಕ ಎಂಡಿಎ ಕಚೇರಿ ಆವರಣಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌, ಶಾಸಕ ಸಿ.ಎನ್‌‍. ಅಶ್ವತ್ಥ ನಾರಾಯಣ್‌, ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಸೇರಿ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.ನಾವು ಪ್ರತಿಭಟನೆಯಷ್ಟೇ ಮಾಡುತ್ತೇವೆ. ಪ್ರತಿಭಟನೆ ವೇಳೆ ಜನ ಆಕ್ರೋಶಗೊಂಡು ಎಂಡಿಎ ಕಚೇರಿಗೆ ಮುತ್ತಿಗೆ ಹಾಕಬಹುದು. ಅವರನ್ನು ತಡೆಯಲಾಗುವುದಿಲ್ಲ. ಪ್ರತಿಭಟನೆಗೆ ಅವಕಾಶ ನೀಡುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ್ದೇವೆ ಎಂದು ನಗರ ಬಿಜೆಪಿ ಅಧ್ಯಕ್ಷ ಎಲ್‌. ನಾಗೇಂದ್ರ ಹೇಳಿದರು.

PREV

Recommended Stories

ದೇಶದಲ್ಲೇ ನಾನೇ ನಂ.1 ಗೃಹ ಮಂತ್ರಿ: ಡಾ.ಪರಂ
ವರ್ಷಾಂತ್ಯಕ್ಕೆ ಡಿಕೆಶಿ ಸಿಎಂ ಎಂದ ಶಿವಗಂಗಾಗೆ ನೋಟಿಸ್‌